ಬೆಂಗಳೂರು: ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಕಿಡಿಕಾರಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದು, ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಕಳೆದ ಒಂದು ವರ್ಷದಲ್ಲಿ ಎಷ್ಟು ಮಂತ್ರಿಗಳು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಸಮಸ್ಯೆಗಳ ಬಗ್ಗೆ ಏನು ಸೂಚನೆಗಳನ್ನು ಕೊಟ್ಟಿದ್ದಾರೆ. ಜನರ ಕಷ್ಟಗಳನ್ನು ಬಗೆಹರಿಸಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು, ಮುಖ್ಯಮಂತ್ರಿಗಳು ಸಭೆ ನಡೆಸಿ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದರು.
ಜನರ ಕೆಲಸಗಳು ಏನಾಗಿವೆ? ಅಭಿವೃದ್ಧಿ ಕೆಲಸಗಳು ಎಲ್ಲಾದರೂ ಆಗಿವೆಯೇ? ಕೇವಲ ಗ್ಯಾರಂಟಿಗಳ ಹೆಸರು ಹೇಳಿಕೊಂಡು ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಅದಲ್ಲದೇ ಸರ್ಕಾರ ಎಲ್ಲಾ ಸಾಧನೆಗಳನ್ನು ಹೇಳಿಕೊಳ್ಳುತ್ತಿದೆ. ಆದರೆ, ಪೆನ್ ಡ್ರೈವ್ ಸಾಧನೆ ಮಾತ್ರ ಹೇಳಿಕೊಳ್ಳುತ್ತಿಲ್ಲ. ವಿಶ್ವದಾದ್ಯಂತ ಸಂಚಲನ ಮೂಡಿಸಿದ ವಿಷಯವನ್ನು ಇವರು ಹೇಳೇ ಇಲ್ಲ. ಇದು ನನಗೆ ಆಶ್ಚರ್ಯ ಉಂಟು ಮಾಡಿದೆ ಎಂದು ಕುಟುಕಿದರು.