ನಿಮ್ಮ ಸುದ್ದಿ ಬಾಗಲಕೋಟೆ
ಸಂಗೊಳ್ಳಿ ರಾಯಣ್ಣನ ವಿರುದ್ಧ ಅವಹೇಳನವಾಗಿ ಮಾತನಾಡಿದ ಪಂಚಮಸಾಲಿ ಸಮಾಜದ ಮುಖಂಡ ಮಹಾಂತೇಶ ಹಳ್ಳೂರ ವಿರುದ್ಧ ಹುನಗುಂದ ಠಾಣೆಯಲ್ಲಿ ದೂರು ದಾಖಲಾಗಿದೆ.
ಜಿಲ್ಲೆಯ ಕೂಡಲಸಂಗಮದಲ್ಲಿ ಜನೇವರಿ ೯ರಂದು ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕುರಿತ ಹೋರಾಟಕ್ಕೆ ನಡೆದ ಪೂರ್ವಭಾವಿ ಸಭೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿದ ಮಹಾಂತಪ್ಪ ಉಂಡೋಡಿ ಹುನಗುಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಂದು ನಡೆದ ಸಭೆಯಲ್ಲಿ ವೈಯುಕ್ತಿಕ ಅಭಿಪ್ರಾಯ ವ್ಯಕ್ತಪಡಿಸುವಾಗ ಮುಖಂಡ ಮಹಾಂತೇಶ ಹಳ್ಳೂರ ಅವರು, ಬ್ಯಾನರ್‌ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೊ ಹಾಕಿದ್ದನ್ನು ವಿರೋಧಿಸಿದ್ದರು. ಸಂಗೊಳ್ಳಿ ರಾಯಣ್ಣ ವಾಲಿಕಾರ, ಚನ್ನಮ್ಮ ಅವನ ವಾಲಿಕಾರ ಆಗುವುದು ಬೇಡವೆಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಮುಖಂಡನ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಹುನಗುಂದ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ ೧೬೮೦, ೨೯೮, ೫೦೫(೨) ರಡಿ ಕೇಸ್ ದಾಖಲು ಮಾಡಲಾಗಿದೆ.