ನಿಮ್ಮ ಸುದ್ದಿ ಬಾಗಲಕೋಟೆ
ಜಿಲ್ಲೆಯ 9 ಕೋವಿಡ್-19 ಮಾದರಿ ಲಸಿಕಾ ಕೇಂದ್ರಗಳಲ್ಲಿ ಲಸಿಕಾ ಅಭಿಯಾನಕ್ಕೆ ಬಾಗಲಕೋಟೆಯ ಹಾನಗಲ್ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಜಂಟಿಯಾಗಿ ಶನಿವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ್, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೇಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಪೂರ್ವದಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ದೇಶಾದ್ಯಂತ ವಿಡಿಯೋ ವರ್ಚೂವಲ್ ಮೂಲಕ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನ ಚಾಲನಾ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು.
ನಂತರ ನವನಗರದ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದಲ್ಲಿ ತೆರೆಯಲಾದ ಕೋವಿಡ್-19 ಮಾದರಿ ಲಸಿಕಾ ಕೇಂದ್ರದಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಕೋವಿಡ್ ಲಸಿಕೆ ನೀಡಲು ದೇಶಾದ್ಯಂತ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ 9 ಲಸಿಕಾ ಕೇಂದ್ರಗಳನ್ನು ಗುರುತಿಸಿಸಲಾಗಿದೆ. ಬಾಗಲಕೋಟೆ ಜಿಲ್ಲಾ ಆಸ್ಪತ್ರೆ, ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯ, ನವನಗರದ ನಗರ ಆರೋಗ್ಯ ಪ್ರಾಥಮಿಕ ಕೇಂದ್ರ, 5 ತಾಲೂಕಾ ಆರೋಗ್ಯ ಕೇಂದ್ರಗಳಾದ ಮುಧೋಳ, ಬೀಳಗಿ, ಜಮಖಂಡಿ, ಹುನಗುಂದ, ಬದಾಮಿ ಹಾಗೂ ಜಮಖಂಡಿ ತಾಲೂಕಿನ ಚಿಕ್ಕಲಕಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿ ಒಟ್ಟು 9 ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ಮಾದರಿ ಲಸಿಕಾ ಕೇಂದ್ರದಲ್ಲಿ ನೂರು ಜನರಿಗೆ ಲಸಿಕೆಯನ್ನು ನೀಡಲಾಗುತ್ತಿದ್ದು, ಒಟ್ಟಾರೆಯಾಗಿ ಜಿಲ್ಲೆಯಲ್ಲಿ 17233 ಜನವರಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಇದಕ್ಕಾಗಿ 76 ಸ್ಥಳಗಳನ್ನು ಗುರುತಿಸಲಾಗಿದ್ದು, 285 ವ್ಯಾಕ್ಸಿನೇಟರ್ ಗುರುತುಮಾಡಲಾಗಿದೆ. ಪ್ರಥಮದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮೊದಲು ಡೋಜ್ ಲಸಿಕೆ ಪಡೆದ ವ್ಯಕ್ತಿಗೆ ಒಂದು ತಿಂಗಳ ನಂತರ ಮತ್ತೊಂದು ಡೋಸ್ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.
ಲಸಿಕೆಯನ್ನು 18 ವರ್ಷದೊಳಗಿನ ಮಕ್ಕಳಿಗೆ, ಗರ್ಭಿಣಿ ಮಹಿಳೆಯರಿಗೆ ಹಾಗೂ ರಕ್ತದ ಒತ್ತಡ, ಹಾಗೂ ಮಧುಮೇಹ ರೋಗದಿಂದ ಬಳಲುತ್ತಿರುವವರಿಗೆ ಮಾತ್ರ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿಲ್ಲ. ಪ್ರತಿ ಲಸಿಕಾ ಕೇಂದ್ರದಲ್ಲಿ ಚಿಕಿತ್ಸೆ ನೀಡುವ ಮೂರು ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
*ಕೋವಿಡ್ ಲಸಿಕೆ ಪಡೆದ ಪ್ರಥಮ ವ್ಯಕ್ತಿ*
ಜಿಲ್ಲೆಯಲ್ಲಿ ಕೋವಿಡ್ ಅಭಿಯಾನಕ್ಕೆ ಶನಿವಾರ ಚಾಲನೆ ದೊರೆತಿದ್ದು, ಪ್ರಥಮವಾಗಿ ನವನಗರದ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದಲ್ಲಿ ಸ್ಥಾಪಿಸಲಾದ ಕೋವಿಡ್ ಮಾದರಿ ಲಸಿಕಾ ಕೇಂದ್ರದಲ್ಲಿ ಗ್ರುಪ್ ಡಿ ಸಿಬ್ಬಂದಿ ಕಪೀಲ ಗಂಜಿಹಾಳ ಲಸಿಕೆ ಪಡೆದ ಪ್ರಥಮ ವ್ಯಕ್ತಿಯಾಗಿದ್ಧಾರೆ. ಅದೇ ರೀತಿ ಹಾನಗಲ್ ಕುಮಾರೇಶ್ವರ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶ್ರೀಶೈಲ ಕೊಪ್ಪದ ಕೋವಿಡ್ ಲಸಿಕೆ ಪಡೆದ ಪ್ರಥಮ ವ್ಯಕ್ತಿಯಾಗಿದ್ದಾರೆ.