ಪರಿಷತ್ ಚುನಾವಣೆ : ಪ್ರತಿಬಂಧಕಾಜ್ಞೆ ಜಾರಿ
ನಿಮ್ಮ ಸುದ್ದಿ ಬಾಗಲಕೋಟೆ
ವಿಜಯಪುರ-ಬಾಗಲಕೋಟೆ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ-೨೦೨೧ಕ್ಕೆ ಸಂಬಂಧಿಸಿದಂತೆ ಡಿಸೆಂಬರ ೧೦ ರಂದು ಮತದಾನ ದಿನದ ನಿಮಿತ್ಯ ಜಿಲ್ಲೆಯಾದ್ಯಂತ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಡಿಸೆಂಬರ ೭ರ ಸಂಜೆ ೪ ರಿಂದ ಡಿಸೆಂಬರ ೧೦ರ ವರೆಗೆ ಸಿಆರ್‌ಪಿಸಿ ೧೯೭೪ ಕಲಂ ೧೪೪ ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ ೧೯೬೩ರ ಕಲಂ ೩೫ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಪ್ರತಿಬಂಧಕಾಜ್ಞೆಯಲ್ಲಿ ಜಿಲ್ಲೆಯಾದ್ಯಂತ ೫ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದಾಗಲಿ, ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ. ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಾಕಾಸ್ತçವನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ. ಮತಗಟ್ಟೆಗಳ ೧೦೦ ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ.
ಸ್ಪೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದು, ಶೇಖರಿಸುವುದು ಹಾಗೂ ಶವಗಳ ಆಕೃತಿ, ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಬಹಿರಂಗವಾಗಿ ಘೋಷಣೆ, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ, ನೀತಿಯನ್ನು ಆಕ್ರಮಿಸಬಹುದಾದ ಕೃತ್ಯ ಮಾಡುವುದನ್ನು ನಿಷೇಧಿಸಲಾಗಿದೆ.
ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ದಕ್ಕೆ ತರದಂತೆ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಸದರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ ೧೮೮ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶ ಮತ ಎಣಿಕೆ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯ ನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲವೆಂದು ಆದೇಶದಲ್ಲಿ ತಿಳಿಸಿದ್ದಾರೆ.