ಬೆಂಗಳೂರು:
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನಲ್ಲಿರುವ ರನ್ನ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸುವ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.
ನವೆಂಬರ್ 1 ರಿಂದ ಕಬ್ಬು ಅರೆಯಲೇಬೇಕಾದ ಅನಿವಾರ್ಯತೆ ಇರುವುದರಿಂದ ಶೀಘ್ರವೇ ರನ್ನ ಕಾರ್ಖಾನೆ ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಸೂಕ್ತ ತಿರ್ಮಾನ ಕೈಗೊಳ್ಳಬೇಕು ಎಂದು ಅಬಕಾರಿ ಮತ್ತು ಬಾಗಲಕೋಟೆ ಉಸ್ತುವಾರಿ ಸಚಿವರಾದ ಆರ್ ಬಿ ತಿಮ್ಮಾಪೂರ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ರನ್ನ ಸಕ್ಕರೆ ಕಾರ್ಖಾನೆಯನ್ನು ಪುನಾರಂಭ ಮಾಡುವ ಮೂಲಕ ಕಬ್ಬು ಬೆಳೆಗಾರರಿಗೆ ಅನುಕೂಲ ಮಾಡಿಕೊಡಬೇಕಿದೆ. ಅಲ್ಪಾವಧಿ ಟೆಂಡರ್ ಕರೆಯುವುದು ಸೇರಿದಂತೆ ಶೀಘ್ರವೇ ಕಾರ್ಖಾನೆ ಪುನರ್ ಆರಂಭಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್, ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಅತೀಕ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಇದೇ ವೇಳೆ ರೈತ ಮುಖಂಡರಾದ ಕೆ ಟಿ ಪಾಟೀಲ್, ಉದಯ್ ಸಾರವಾಡ, ಉದಯ್ ಸಿಂಗ್ ಪಡತಾರೆ, ಬಸವರಾಜ್ ಜಮಖಂಡಿ, ವಿಠಲ್ ತುಮ್ಮರಮಟ್ಟಿ, ಗಿರೀಶ್ ಲಕ್ಷಾಣಿ, ಸಂಜಯ್ ನಾಯಕ್, ರಾಜುಗೌಡ ನ್ಯಾಮಗೌಡ ಸೇರಿದಂತೆ ಹಲವರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.