ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುವುದಿಲ್ಲ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಸ್ಪಷ್ಟಪಡಿಸಿದ್ದು, ಐದು ಪಂದ್ಯಗಳ ಈ ಸರಣಿಯಲ್ಲಿ ಕೆಎಲ್ಆರ್ ಕೇವಲ ಬ್ಯಾಟರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ತಂಡದಲ್ಲಿರುವ ಇಬ್ಬರು ವಿಕೆಟ್ ಕೀಪರ್ಗಳಲ್ಲಿ ಒಬ್ಬರಿಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಸಿಗಲಿದೆ ಎಂದು ಭಾರತ ತಂಡದ ಕೋಚ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ್ರಾವಿಡ್, ರಾಹುಲ್ ಈ ಸರಣಿಯಲ್ಲಿ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಗಿ ಕಾಣಿಸಿಕೊಳ್ಳುವುದಿಲ್ಲ. ಆಯ್ಕೆಯಲ್ಲಿಯೇ ನಾವು ಅದನ್ನು ಸ್ಪಷ್ಟಪಡಿಸಿದ್ದೇವೆ. ಇದಕ್ಕಾಗಿಯೇ ತಂಡದಲ್ಲಿ ಇನ್ನಿಬ್ಬರು ವಿಕೆಟ್ ಕೀಪರ್ಗಳನ್ನು ಆಯ್ಕೆ ಮಾಡಿದ್ದೇವೆ ಎಂದು ರಾಹುಲ್ ದ್ರಾವಿಡ್ ವಿವರಿಸಿದರು.
ನಿಸ್ಸಂಶಯವಾಗಿ ಕೆಎಲ್ ರಾಹುಲ್ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದು, ವಿಕೆಟ್ ಕೀಪಿಂಗ್ ಜೊತೆ ಬ್ಯಾಟಿಂಗ್ನಲ್ಲೂ ರಾಹುಲ್ ಮಿಂಚಿದ್ದರು. ಇದರಿಂದಾಗಿ ನಾವು ಸರಣಿಯನ್ನು ಡ್ರಾ ಮಾಡಿಕೊಳ್ಳಲು ಸಾಧ್ಯವಾಯಿತು. ಆದರೆ ಈ ಬಾರಿ ಅವರನ್ನು ನಾವು ಕೇವಲ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ರಾಹುಲ್ ದ್ರಾವಿಡ್ ತಿಳಿಸಿದರು.ಕೆಎಲ್ ರಾಹುಲ್ ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ವಿಕೆಟ್ ಕೀಪಿಂಗ್ ಮೂಲಕ ಮಿಂಚಿದ್ದರು.
ಟೆಸ್ಟ್ ಕ್ರಿಕೆಟ್ನಲ್ಲಿ ಅವರು ವಿಕೆಟ್ ಹಿಂದೆ ಕಾಣಿಸಿಕೊಂಡಿರಲಿಲ್ಲ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮೂಲಕ ಅವರು ದೀರ್ಘಾವಧಿ ಕ್ರಿಕೆಟ್ನಲ್ಲೂ ವಿಕೆಟ್ ಕೀಪಿಂಗ್ ಮಾಡಬಲ್ಲೆ ಎಂಬುದನ್ನು ನಿರೂಪಿಸಿದ್ದರು. ಆದರೀಗ ಅವರನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದ್ದು, ಕೆಎಲ್ ರಾಹುಲ್ ಮುಂಬರುವ ಟೆಸ್ಟ್ ಸರಣಿಗಳಲ್ಲಿ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವುದು ಅನುಮಾನ.
ಏಕೆಂದರೆ ಅಪಘಾತದಿಂದ ಗಾಯಗೊಂಡು ಟೀಮ್ ಇಂಡಿಯಾದಿಂದ ಹೊರಗುಳಿದಿರುವ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಐಪಿಎಲ್ ಮೂಲಕ ಕಂಬ್ಯಾಕ್ ಮಾಡಲಿದ್ದು, ಪಂತ್ ಆಗಮನದೊಂದಿಗೆ ಟೀಮ್ ಇಂಡಿಯಾದ ವಿಕೆಟ್ ಕೀಪಿಂಗ್ ಜವಾಬ್ದಾರಿ ಮತ್ತೆ ಅವರಿಗೆ ಒಲಿಯಲಿದೆ. ಹಾಗಾಗಿ ಟೆಸ್ಟ್ ಕ್ರಿಕೆಟ್ನಲ್ಲಿ ಕೆಎಲ್ ರಾಹುಲ್ ಮತ್ತೊಮ್ಮೆ ವಿಕೆಟ್ ಕೀಪರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ತುಂಬಾ ಕ್ಷೀಣ ಎನ್ನಬಹುದು ಎಂದು ಸೂಚಿಸಿದ್ದಾರೆ.