ನವದೆಹಲಿ: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡ ಪ್ರಶ್ನಿಸಿ ಮತ್ತು ಎಫ್ಐಆರ್ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇದರೊಂದಿಗೆ ಸಿದ್ದರಾಮಯ್ಯ ಹಾಗೂ ಇತರ ಕಾಂಗ್ರೆಸ್ ನಾಯಕರು ತುಸು ನಿರಾಳರಾಗುವಂತಾಗಿದ್ದು, ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.
ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದ ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಇದೊಂದು ಶಾಂತಿಯುತ ಪ್ರತಿಭಟನೆಯಾಗಿತ್ತು. ಪ್ರತಿಭಟನೆಯಿಂದ ಯಾವುದೇ ರೀತಿಯ ಸಮಸ್ಯೆಯಾಗಿರಲಿಲ್ಲ. ಇದೊಂದು ‘ರಾಜಕೀಯ ಪ್ರತಿಭಟನೆ’ಯಾಗಿತ್ತು ಎಂದು ಮಾಹಿತಿ ತಿಳಿದು ಬಂದಿದೆ.