ದೆಹಲಿ: ಲೋಕಸಭಾ ಚುನಾವಣೆ ನಡೆಸಲು ಆಯೋಗ ಸರ್ವಸನ್ನದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿರುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಚುನಾವಣೆಯೂ ನಮಗೆ ಪರೀಕ್ಷೆ ಇದ್ದಂತೆ. ಮುಕ್ತ ನ್ಯಾಯಸಮ್ಮತ, ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ದೇಶಾದ್ಯಂತ 97 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ದೇಶಾದ್ಯಂತ 10.5 ಲಕ್ಷ ಮತದಾನ ಕೇಂದ್ರಗಳು ಇದ್ದು, ಚುನಾವಣಾ ಕರ್ತವ್ಯಕ್ಕೆ ಒಂದೂವರೆ ಕೋಟಿ ಸಿಬ್ಬಂದಿ ಬಳಕೆ ಮಾಡಲಾಗುವುದು. ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗುವುದು.
ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ ಎಂದು ಹೇಳಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ ಎಂದರು.
48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.