ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ ಎಂದು ಮಾಹಿತಿ ತಿಳಿದು ಬಂದಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.
5, 6, 8, 9ನೇ ತರಗತಿಯ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಖಾಸಗಿ ಶಾಲೆಗಳಷ್ಟೇ ಬೋರ್ಡ್ ಪರೀಕ್ಷೆಗೆ ತಕರಾರಿದೆ. ಸ್ವಹಿತಾಸಕ್ತಿಗಾಗಿ ಖಾಸಗಿ ಶಾಲೆಗಳು ರಿಟ್ ಸಲ್ಲಿಸಿವೆ. ಪೋಷಕರಾಗಲೀ, ಮಕ್ಕಳಾಗಲೀ ಬೋರ್ಡ್ ಪರೀಕ್ಷೆಗೆ ಆಕ್ಷೇಪಿಸಿಲ್ಲ. ಬೋರ್ಡ್ ಪರೀಕ್ಷೆಯಿಂದ ಖಾಸಗಿ ಶಾಲೆಗಳ ಮೌಲ್ಯಮಾಪನವಾಗಲಿದೆ. ತಡೆಯಾಜ್ಞೆಯಿಂದ ಸೋಮವಾರ ನಡೆಯುವ ಪರೀಕ್ಷೆ ಅಡಕತ್ತರಿಗೆ ಸಿಲುಕಿದೆ. ಏಕಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಸರ್ಕಾರದ ಪರ ಎಎಜಿ ವಿಕ್ರಮ್ ಹುಯಿಲಗೋಳ್ ಅವರು ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು.
2023-24ನೇ ಸಾಲಿನಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ 5, 8, 9ನೇ ಹಾಗೂ 11 ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು.
ಮತ್ತೊಂದೆಡೆ ಸರ್ಕಾರದ ಈ ಮನವಿಗೆ ಖಾಸಗಿ ಶಾಲೆಗಳ ಸಂಘ ಆಕ್ಷೇಪ ವ್ಯಕ್ತಪಡಿಸಿತ್ತು. ಅಂತಿಮವಾಗಿ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಎಕ್ಸಾಂ ನಡೆಸಲು ಗ್ರೀನ್ ಸಿಗ್ನಲ್ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರೂಪ್ಸ ಹಾಗೂ ಅವರ್ ಸ್ಕೂಲ್ಸ್ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಮೇಲ್ಮನವಿಯನ್ನು ಪುರಸ್ಕರಿಸಿದ ಸುಪ್ರೀಂ, ಪರೀಕ್ಷೆ ನಡೆಸದಂತೆ ತಡೆ ನೀಡಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸುವಂತೆ ಹೈಕೋರ್ಟ್ಗೆ ಸುಪ್ರೀಂಕೋರ್ಟ್ ಸೂಚಿಸಿತ್ತು ಎಂದು ಮಾಹಿತಿ ಬೆಳಕಿಗೆ ಬಂದಿದೆ.