ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಕೊಪ್ಪಳದ ಕಾರಟಗಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವುದು ಬೆಳಕಿಗೆ ಬಂದಿದೆ.
ಭಾನುವಾರ ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮೋದಿ ಮೋದಿ’ ಎಂದು ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು. ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಾರೆ ಮೋದಿ ಎಂದರು.
ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಕಾರಣ ಇನ್ನು ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದು ಕೂಗಿದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ತಿಳಿಸಿದರು.
ಲೋಕಸಭೆ ಚುನಾವಣೆ ಬಂದಿದೆ. ಮತ್ತೆ ಬಿಜೆಪಿಯವರು ಸುಳ್ಳು ಹೇಳಿಕೊಂಡು ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಕೇಳಲು ನಾಚಿಕೆ ಆಗಬೇಕು. ನಮ್ಮ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದರೆ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡಿ, ಯುವಕರಿಗೆ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಆದರೆ, ಯುವಕರಿಗೆ ಉದ್ಯೋಗ ನೀಡಿಲ್ಲ ಎಂದು ಸೂಚಿಸಿದರು.