ಬೆಂಗಳೂರು : ಪಾರದರ್ಶಕ, ಮುಕ್ತ ಚುನಾವಣೆ ನಡೆಸುವಲ್ಲಿ ಚುನಾವಣೆ ಆಯೋಗ ಸಂಪೂರ್ಣ ವಿಫಲವಾಗಿದೆ. ಹಣ ಹಂಚಿಕೊಂಡು ಚುನಾವಣೆಯನ್ನು ನಡೆಸಲು ಅವಕಾಶ ಮಾಡಿಕೊಟ್ಟುಬಿಡಿ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದರು.
ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ಗಿಫ್ಟ್ ಕಾರ್ಡ್ಗಳನ್ನು ಹಂಚಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರವಾಗಿ ಕ್ಯೂಆರ್ ಕೋಡ್ ಇರುವ ಕೂಪನ್ಗಳ ಹಂಚಿಕೆ ಮಾಡಲಾಗಿದೆ. ತಡೆಯಲು ಹೋದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿದರು.
10 ಸಾವಿರ ರೂ. ಮೌಲ್ಯದ ಗಿಫ್ಟ್ ಕಾರ್ಡ್ ಅನ್ನು ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಕಡೆಯವರು ಮತದಾರರಿಗೆ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕುಸುಮಾ ಹನುಮಂತಯ್ಯ, ಕುಣಿಗಲ್ ಶಾಸಕ ಡಾ ರಂಗನಾಥ್, ಮಾಗಡಿ ಶಾಸಕ ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಸಿಎಂ ಡಿಕೆ ಶಿವಕುಮಾರ್ ಹೆಸರಿನಲ್ಲಿ ಕೂಪನ್ ಕಾರ್ಡುಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಎಲ್ಲಾ ಕೂಪನ್ ಕಾರ್ಡುಗಳನ್ನು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ತೋರಿಸಿದರು. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಕೂಪನ್ ಕಾರ್ಡುಗಳನ್ನು ಕಾಂಗ್ರೆಸ್ ಹಂಚಿತ್ತು ಎಂದು ಕಿಡಿಕಾರಿದರು.