ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ.ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಪಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ವೆಗಳಿಗೆ ಪ್ರತಿಕ್ರಿಯಿಸಿದ ಅವರು ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸೂಚಿಸಿದರು.
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದು ತಿಳಿಸಿದರು.
ಪದವೀಧರರ ಕ್ಷೇತ್ರದಿಂದ ರಾಮೋಜಿ ಗೌಡ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಬಿ. ಟಿ.ಶ್ರೀನಿವಾಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನಮ್ಮ ಮಾಹಿತಿಯ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.