ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಘೋಷಿಸಿದ ಬೆನ್ನಲ್ಲೇ ಅವರ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಮಾತುಕತೆ ನಡೆಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಮಮತಾ ಅವರನ್ನು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ ಎಂಬುದು ಪಕ್ಷದ ನಾಯಕರ ಮಾತುಗಳಿಂದ ಈಗಾಗಲೇ ಸ್ಪಷ್ಟವಾಗಿದ್ದು, ಮಮತಾ ಇಲ್ಲದೆ ಮೈತ್ರಿ ಅಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಹಿಂದೆ ಹೇಳಿದ್ದರು. ರಾಜಕೀಯ ಊಹಾಪೋಹಗಳ ಮಧ್ಯೆ, ಮಮತಾ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಂ ರಮೇಶ್, ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸುವ ಮೂಲಕ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿಯಾಗಿದ್ದು, ಮಮತಾ ಇಲ್ಲದೆ ನಾವು ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಅವರು ‘ಇಂಡಿಯಾ’ ಮೈತ್ರಿಕೂಟದ ಅವಿಭಾಜ್ಯ ಅಂಗ. ಪ್ರತಿಪಕ್ಷಗಳ ಮೈತ್ರಿಕೂಟದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮಮತಾ ಅವರ ಪಾತ್ರ ದೊಡ್ಡದು ಎಂದು ವಿವರಿಸಿದರು.
ಬಂಗಾಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಗುರುವಾರ ಆರಂಭವಾಗಿದ್ದು, ರಾಹುಲ್ ಅಸ್ಸಾಂನಿಂದ ಬಂಗಾಳಕ್ಕೆ ಬಂದಿದ್ದು, ಮುಂದಿನ ದಿನಗಳಲ್ಲಿ ಅವರು ಹಲವಾರು ಕಾರ್ಯಕ್ರಮಗಳನ್ನು ಹೊಂದಿದ್ದಾರೆ. ಅವುಗಳಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಕೆಲವು ನಿಮಿಷಗಳಾದರೂ ರಾಹುಲ್ ಪರವಾಗಿ ನಿಲ್ಲುವಂತೆ ಮಮತಾ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ. ಈ ವಿಚಾರವಾಗಿ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಜೈರಾಂ ತಿಳಿಸಿದ್ದಾರೆ.