ಬೆಂಗಳೂರು: ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ತೆರಿಗೆ ಹಂಚಿಕೆ ಚರ್ಚೆ, ಪ್ರತಿಚರ್ಚೆಗಳ ಬಗ್ಗೆ ಇತ್ತೀಚೆಗೆ ಬಿಜೆಪಿ ನಾಯಕರಾದ ಬಸವರಾಜ ಬೊಮ್ಮಾಯಿ ಹಾಗೂ ಜೆಡಿಎಸ್ ನಾಯಕರಾದ ಎಚ್ ಡಿ ಕುಮಾರಸ್ವಾಮಿಯವರ ಇತ್ತೀಚಿನ ಹೇಳಿಕೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಎಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪೋಸ್ಟ್ ಹಾಕಿರುವ ಅವರು, “ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘‘ದೆಹಲಿ ಚಲೋ’’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ’’ ಎಂದು ತಿಳಿಸಿದರು.
ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತಿದ್ದು, ಪ್ರಧಾನಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ ಎಂದರು.
ಕೇಂದ್ರ ಹಣಕಾಸು ಆಯೋಗದ ವಿರುದ್ಧ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘’ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಪ್ರಶ್ನಿಸಿದ್ದರು’’