ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಇನ್ನೇನು ಕೆಲವೇ ಕ್ಷಣಗಳಲ್ಲಿ ನಡೆಯಲಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಸೀತಾ- ರಾಮ- ಲಕ್ಷ್ಮಣ ಸ್ವಾಮಿ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿಯ ನೂತನ ಶಿಲಾ ಪ್ರತಿಷ್ಠಾಪನಾ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಡಾ ಪರಮೇಶ್ವರ್, ರಾಮಲಿಂಗಾರೆಡ್ಡಿ ಕೂಡಾ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪ್ರಮುಖ ನಾಯಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ ರಾಮಮಂದಿರ ವಿಚಾರವಾಗಿ ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಆಹ್ವಾನ ತಿರಸ್ಕಾರ ಮಾಡಿದೆ.ಈ ನಡುವೆ ಕಾಂಗ್ರೆಸ್ ನಾಯಕರ ನಡೆಯ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ.
ಅಯೋಧ್ಯೆ ವಿಚಾರವಾಗಿ ಬಿಜೆಪಿ ರಾಜಕೀಯಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದರೆ ಅಯೋಧ್ಯೆ ವಿಚಾರದಲ್ಲಿ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ.