ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮುನ್ನ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿದ್ದರಾಮಯ್ಯ, ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಎಂದಿದ್ದಾರೆ. ಅಲ್ಲದೆ, ರೈತರಿಗೆ ಸಾಲು ಸಾಲು ಅನ್ಯಾಯ ಎಸಗಿದ ಬಿಜೆಪಿಯನ್ನು ರೈತರು ಯಾಕೆ ಬೆಂಬಲಿಸಬೇಕು ಎಂದು ಪ್ರಶ್ನಿಸಿದರು.
ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ನೀರಾವರಿ ಯೋಜನೆಗಳಲ್ಲಿ ಅನ್ಯಾಯ, ಬಿಡುಗಡೆಯಾಗದ ಬರ ಪರಿಹಾರ, ನರೇಗಾ ಕೆಲಸದ ದಿನಗಳ ಹೆಚ್ಚಳಕ್ಕೆ ಸಿಗದ ಅನುಮತಿ ಹೀಗೆ ರಾಜ್ಯದ ರೈತರಿಗೆ ಬಿಜೆಪಿಯಿಂದ ಸಾಲು ಸಾಲು ಅನ್ಯಾಯವಾಗಿದೆ. ಹೀಗಿರುವಾಗ ರಾಜ್ಯದ ರೈತರು ಯಾಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದರು.
ರೈತ ಚಳವಳಿಗಳ ತವರುನೆಲ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಬಿ.ಎಸ್ ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ನಂತರ ಮುಖ್ಯಮಂತ್ರಿಯಾದ ಮೇಲೆ ನಮ್ಮ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದು, ಹಾವೇರಿಯಲ್ಲಿ ರಸಗೊಬ್ಬರ ಕೇಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿ ಅಮಾಯಕ ರೈತರನ್ನು ಬಲಿ ಪಡೆದಿದ್ದರು. ಇಂದು ಅದೇ ಯಡಿಯೂರಪ್ಪನವರ ಮಗನಿಗೆ ಮತ ನೀಡಿ ಎನ್ನಲು ನಿಮ್ಮ ಆತ್ಮಸಾಕ್ಷಿ ಒಪ್ಪುವುದೇ? ಎಂದು ಕೇಳಿದ್ದಾರೆ.
2018ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ 1 ಲಕ್ಷದ ವರೆಗಿನ ರೈತರ ಸಾಲ ಮನ್ನಾ ಮಾಡುವ ಭರವಸೆ ನೀಡಿದ್ದರು. ಅಧಿಕಾರ ಸಿಕ್ಕ ಮೇಲೆ ಕೊಟ್ಟ ಮಾತನ್ನು ಈಡೇರಿಸದೆ, ತಮಗೆ ದ್ರೋಹ ಬಗೆದ ಬಿಜೆಪಿಯನ್ನು ನಾಡಿನ ರೈತರು ಯಾಕೆ ಬೆಂಬಲಿಸಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ ಬರ ಘೋಷಣೆ ಮಾಡಿ ಆರು ತಿಂಗಳುಗಳ ಕಳೆದಿವೆ. 18,177 ಕೋಟಿ ರೂ. ಪರಿಹಾರದ ಹಣ ಬಿಡುಗಡೆಗೆ ಒತ್ತಾಯಿಸಿ ಹಲವು ಬಾರಿ ಪತ್ರ ಬರೆದಿದ್ದೇನೆ. ಖುದ್ದಾಗಿ ತಮ್ಮನ್ನು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೂ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಿಡುಗಡೆ ಆಗಿಲ್ಲ. ರಾಜ್ಯದ ರೈತರ ಮೇಲೆ ಯಾಕಿಷ್ಟು ದ್ವೇಷ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.