ರಾಮನಗರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಂಡಿದ್ದು, ಇದೇ ವೇಳೆ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳನ್ನು ಬಿಜೆಪಿ ನಾಯಕರೇ ಮಾಡಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.
ಇದಕ್ಕೆ ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ಹೇಳಿಕೆ ಪುಷ್ಟಿ ಎಂಬಂತಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅವರ ಗೆಲುವಿಗೆ ಸಹಾಯ ಮಾಡಿದ್ದೆ ಎಂದು ಯೋಗೇಶ್ವರ್ ಅವರೇ ಬಾಯಿಬಿಟ್ಟಿದ್ದು, ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕಾರಣದ ಬಗ್ಗೆ ಹೆಚ್ಚು ಆರೋಪ ಮಾಡಿದವರ ಪೈಕಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಂಚೂಣಿಯಲ್ಲಿದ್ದಾರೆ.
ಇತ್ತೀಚೆಗಷ್ಟೇ ಮಾತನಾಡಿದ್ದ ಯತ್ನಾಳ್, ಯಾವುದೇ ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಕಾಂಗ್ರೆಸ್ ಸೋಲು ಖಚಿತ ಎಂದು ಹೇಳಿದ್ದರು. ಆ ಮೂಲಕ ಪರೋಕ್ಷವಾಗಿ ಬಿಜೆಪಿಯಲ್ಲಿನ ಕೆಲವು ನಾಯಕರಿಗೆ ಟಾಂಗ್ ಕೊಟ್ಟಿದ್ದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡಲಾಗಿತ್ತು ಎಂದು ಈ ಹಿಂದೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದು, ಈ ಆರೋಪವು ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಅವರಿಗೆ ಸಂಬಂಧಿಸಿದ್ದಾಗಿದೆ ಎಂಬ ಚರ್ಚೆಗಳು ನಡೆದಿದ್ದವು ಎಂದು ಮಾಹಿತಿ ಕಂಡು ಬಂದಿದೆ.