ನಿಮ್ಮ ಸುದ್ದಿ ಬಾಗಲಕೋಟೆ
ಆಸ್ಪತ್ರೆಗೆ ರೋಗಿಯನ್ನು ಕರೆ ತಂದಲ್ಲಿ ದಾಖಲೆ ಹಾಗೂ ಚಿಕಿತ್ಸೆ ನೀಡುವುದನ್ನು ನಿರಾಕರಿಸುವಂತಿಲ್ಲ. ಹಾಗೆ ಮಾಡಿದರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.
ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ವಿಡಿಯೊ ಕಾನ್ಪರನ್ಸ್ ಮೂಲಕ ಸಬೆ ನಡೆಸಿದ ಜಿಲ್ಲಾಧಿಕಾರಿಗಳು, ರೋಗಿಗಳಿಗೆ ಆಸ್ಪತ್ರೆಯಲ್ಲಿ ಐಸಿಯು ಬೆಡ್, ಆಕ್ಸಜಿನೆಟೆಡ್ ಬೆಡ್ ಇಲ್ಲ ಎಂದು ರೋಗಿಗಳು ಅಲೆದಾಡುವ ಪರಿಸ್ಥಿತಿ ಉಂಟಾಗಬಾರದು. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ರೋಗಿಗಳನ್ನು ಸ್ಥಳಾಂತರಿಸುವುದನ್ನು ನಿಲ್ಲಿಸಿ ಇದ್ದಲ್ಲಿಯೇ ಅವರಿಗೆ ಬೆಡ್ ಕೊಟ್ಟು ಅಗತ್ಯ ಚಿಕಿತ್ಸೆಯನ್ನು ನೀಡಿ ನಂತರದಲ್ಲಿ ಯಾವ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇದೆ ಅಲ್ಲಿಗೆ ಸ್ಥಳಾಂತರಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಈ ನಿರ್ದೇಶನ ನೀಡುವುದರ ಮೂಲಕ ಯಾವುದೇ ರೋಗಿಗಳನ್ನು ಆಸ್ಪತ್ರೆಗಳಲ್ಲಿ ದಾಖಲೆ ಮಾಡಿಕೊಳ್ಳುವುದನ್ನು ನಿರಾಕರಿಸುವಂತಿಲ್ಲ. ಸಾವುಗಳ ಪ್ರಮಾಣವನ್ನು ಹೆಚ್ಚಾಗದಂತೆ ಕ್ರಮಗಳನ್ನು ಜರುಗಿಸಲು ಸೂಚಿಸಿದರು. ಪ್ರಥಮವಾಗಿ ನಾವು ರೆಮ್‍ಡಿಸಿವಿರ್ ಇಂಜೆಕ್ಷನ್ ಅನ್ನು ಬಂದವರಿಗೆಲ್ಲಾ ಕೊಡುವುದು ಪ್ರೊಟೊಕಾಲ್ ಪ್ರಕಾರ ಕೊಡುವುದು ತಪ್ಪು. ಯಾರಿಗೆ ಅತಿ ಅವಶ್ಯಕತೆ ಇದೆ ಹಾಗೂ ಪ್ರೊಟೊಕಾಲ್ ಅನ್ವಯ ಯಾರಿಗೆ ನೀಡಬೇಕು ಅವರಿಗೆ ಮಾತ್ರ ನೀಡಲಾಗುತ್ತದೆ ಎಂದು ಹೇಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಇಬ್ಬರು ಡ್ರಗ್ ಕಂಟ್ರೋಲರ್‍ಗಳಿಗೆ ನಿಗಾವಹಿಸಲು ಸೂಚಿಸಲಾಗಿದೆ. ಕಾಳಸಂತೆಯಲ್ಲಿ ರೆಮ್‍ಡಿಸಿವರ್ ಮಾರಾಟವಾಗದಂತೆ ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ನಿವಾ ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.