ಬೆಂಗಳೂರು: ಮಾಜಿ ಸಿಎಂ ಡಿವಿ ಸದಾನಂದ ಗೌಡ ಅವರಿಗೆ ಒಂದೆಡೆ ಬಿಜೆಪಿಯಿಂದ ಲೋಕಸಭೆ ಚುನಾವಣೆಗೆ ಟಿಕೆಟ್ ದೊರೆಯುತ್ತದೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಈ ಮಧ್ಯೆ, ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳೂ ಇವೆ ಎಂಬ ವದಂತಿಯೂ ಇದೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸದಾನಂದ ಗೌಡ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರುವ ವಿಚಾರವಾಗಿ ಬಹಳಷ್ಟು ಜನ ನಮ್ಮನ್ನು ಬೇಟಿಯಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಕಲಬುರಗಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅನೇಕ ಜನ ಪಕ್ಷ ಸೇರ್ಪಡೆ ವಿಚಾರವಾಗಿ ನಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಿನ್ನೆ ಜಯಪ್ರಕಾಶ್ ಹೆಗ್ಡೆ, ಎಂಪಿಕೆ ನಮ್ಮ ಪಕ್ಷ ಸೇರಿದ್ದು, ಬಹಳ ಜನ ಪಕ್ಷಕ್ಕೆ ಬರುವವರಿದ್ದು, ಅದರಲ್ಲಿ ಹಾಲಿ ಬಿಜೆಪಿ ಎಂಪಿಗಳು ಕೂಡ ಇದ್ದಾರೆ. ಈಗ ಅವರ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದು ತಿಳಿಸಿದರು.
ಸದಾನಂದ ಗೌಡರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಅವರು ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಸದಾನಂದ ಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಕಳೆದ ವರ್ಷದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಊಹೋಪೋಹಗಳು ಹರಿದಾಡಿದ್ದವು.
ವಿಧಾನಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಕ್ಷೇತ್ರಕ್ಕೆ ಅಭ್ಯರ್ಥಿ ಹಾಕುವಲ್ಲಿ ಡಿಕೆ ಶಿವಕುಮಾರ್ ಮೇಲೆ ಸದಾನಂದ ಗೌಡ ಪ್ರಭಾವ ಬೀರಿದ್ದರು ಎಂಬ ಆರೋಪವೂ ಇತ್ತು. ಇದೇ ಕಾರಣಕ್ಕೆ ಅಲ್ಲಿ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಎಂಬ ಟೀಕೆಗಳು ಕೇಳಿಬಂದಿದ್ದವು.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ 15 ಕ್ಕೆ ಬಿಡುಗಡೆಯಾಗಲಿದೆ. ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆಯ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.