ವಿಜಯಪುರ,
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕನ್ನೂ ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಆಗ್ರಹಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರಕಾರ ಗುರುವಾರ ರಾಜ್ಯದ 161 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿತ್ತು. ಇದರಲ್ಲಿ ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳಲ್ಲಿ ತಿಕೋಟಾ ಹೊರತು ಪಡಿಸಿ ಇನ್ನುಳಿದ 12 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳು ಎಂದು ಘೋಷಣಂೆ ಮಾಡಿತ್ತು. ಈ ಪಟ್ಟಿಯಲ್ಲಿ ತಿಕೋಟಾ ತಾಲೂಕನ್ನು ಕೈಬಿಟ್ಟಿರುವ ವಿಷಯ ತಿಳಿದು ಕೂಡಲೇ ಸ್ಪಂದಿಸಿದ ಸಚಿವರು ಪಟ್ಟಿ ಬಿಡುಗಡೆಯಾದ 14.09.2023 ರಂದೇ ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರಿಗೆ ಪತ್ರ ಬರೆದಿದ್ದಾರೆ.
ಅಲ್ಲದೇ, ಈ ಪತ್ರಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿಗಳು ಕೂಡ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವರಿಗೆ ನಿರ್ದೇಶನ ನೀಡಿದ್ದಾರೆ.
ಸಚಿವ ಎಂ. ಬಿ. ಪಾಟೀಲ ಅವರು ಬರೆದಿರುವ ಪತ್ರದಲ್ಲಿ, ತಿಕೋಟಾ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿದಾಗ ಸರಿಯಾದ ಸಮಯಕ್ಕೆ ಮಳೆಯಾಗದೇ ಇರುವುದರಿಂದ ಬಿತ್ತನೆಯು ಕುಂಠಿತವಾಗಿದ್ದು, ಬಿತ್ತಿದ ಬೆಳೆಯಲ್ಲಿ ತೇವಾಂಶ ಕಡಿಮೆಯಾಗಿ ನಾಶವಾಗಿರುತ್ತದೆ ಹಾಗೂ ಈ ತಾಲೂಕಿನ ವ್ಯಾಪ್ತಿಯಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತರು ತಮ್ಮ ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್ ಮೂಲಕ ನೀರುಣಿಸುತ್ತಿದ್ದಾರೆ. ಅಲ್ಲದೇ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿದ್ದು, ಮಳೆಯ ಕೊರತೆಯಿಂದ ಕೊಳವೆ ಭಾವಿ ಹಾಗೂ ತೆರೆದ ಭಾವಿಗಳ ಅಂತರ್ಜಲ ಮಟ್ಟ ತೀವ್ರ ಪ್ರಮಾಣದಲ್ಲಿ ಕುಸಿದಿರುತ್ತದೆ. ವಾಸ್ತವ ಪರಿಸ್ಥಿತಿ ಈ ರೀತಿ ಇದ್ದರೂ ಸಹಿತ ತಿಕೋಟಾ ತಾಲೂಕನ್ನು ಬರಪೀಡಿತ ತಾಲೂಕು ಎಂದು ಪರಿಗಣಿಸದೇ ಇರುವುದರಿಂದ ಈ ಭಾಗದ ರೈತರು ತೀವ್ರ ಆತಂಕ್ಕೊಕಳಗಾಗಿರುತ್ತಾರೆ
ಈ ಎಲ್ಲ ಅಂಶಗಳನ್ನು ಪರಿಗಣಿಸಿ ವಿಜಯಪುರ ಜಿಲ್ಲಾಧಿಕಾರಿಗಳು ತಿಕೋಟಾ ಸೇರಿದಂತೆ ಜಿಲ್ಲೆಯ ಎಲ್ಲ 13 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸುವಂತೆ 01.09.2023 ರಂದು ಸರಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಆದರೂ ತಿಕೋಟಾ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಪರಿಗಣಿಸಿರುವುದಿಲ್ಲ.
ಆದ್ದರಿಂದ ವಿಜಯಪುರ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ವರದಿಯನ್ನು ಆಧರಿಸಿ, ವಾಸ್ತವಾಂಶಗಳನ್ನು ಪರಿಗಣಿಸಿ ರೈತರ ಹಿತದೃಷ್ಠಯಿಂದ, ಸರಕಾರ ಘೋಷಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಗೆ ತಿಕೋಟಾ ತಾಲೂಕನ್ನು ಸಹ ತೀವ್ರ ಬರಪೀಡಿತ ತಾಲೂಕು ಎಂದು ಘೋಷಿಸಲು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತ ಸಚಿವರು ಪತ್ರದಲ್ಲಿ ಮನವಿ ಮಾಡಿದ್ದಾರೆ.