This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ

ತುರ್ತು ಪರಿಸ್ಥಿತಿ ನಿರ್ವಹಣೆ ಸಿದ್ದತೆಗೆ ಡಿಸಿ ರಾಜೇಂದ್ರ ಸೂಚನೆ

ನಿಮ್ಮ ಸುದ್ದಿ ಬಾಗಲಕೋಟೆ

ಪ್ರವಾಹ ಹಾಗೂ ಅತಿವೃಷ್ಟಿಯಂತಹ ತುರ್ತು ಪರಿಸ್ಥಿತಿ ಉಂಟಾದಲ್ಲಿ ತಕ್ಷಣಕ್ಕೆ ಜನರ ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಹವಾಮಾನ ಇಲಾಖೆಯು ಕಾಲಕಾಲಕ್ಕೆ ಮುನ್ಸೂಚನೆ ಹಾಗೂ ಹವಾಮಾನ ವರದಿ ನೀಡಲಿದ್ದು, ಈ ವರದಿಯನ್ನು ಆಧರಿಸಿ ಸಂಬಂಧಿಸಿದ ಅಧಿಕಾರಿಗಳು ತಮಗೆ ವಹಿಸಲಾದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಪ್ರವಾಹ ನಿರ್ವಹಣೆಯಲ್ಲಿ ಚೆನ್ನಾಗಿ ಕಾರ್ಯನಿರ್ವಹಿಸಿದ್ದು, ಈ ಬಾರಿ ಕೂಡ ಅದೇ ರೀತಿಯಲ್ಲಿ ತಂಡಗಳನ್ನು ರಚಿಸಲು ತಿಳಿಸಿದರು.

ತುರ್ತು ಸಂದರ್ಭಗಳಲ್ಲಿ ನದಿತೀರದ ಜನರನ್ನು ಮುಂಚಿತವಾಗಿಯೇ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಅಗತ್ಯವಿರುವ ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜಿಲ್ಲೆಗೆ ಅಗತ್ಯವಿರುವ ಬೋಟ್‍ಗಳ ಕುರಿತು ಎಲ್ಲ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಕೂಡಲೇ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು. ತುರ್ತು ಸಂದರ್ಭದಲ್ಲಿ ಜನರನ್ನು ಸ್ಥಳಾಂತರಿಸಲು ಹಾಗೂ ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಸ್ವಯಂಸೇವಾ ಸಂಸ್ಥೆಗಳ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳಲು ತಿಳಿಸಿದರು.

*ದಿನದ 24 ಗಂಟೆ ಕಂಟ್ರೋಲ್ ರೂಮ್ ಸ್ಥಾಪನೆ*
——————————-
ತುರ್ತು ಸಂದರ್ಭದಲ್ಲಿ ಪರಿಹಾರ ಹಾಗೂ ಪುನರ್ವಸತಿ ಕಾರ್ಯಗಳಿಗೆ ಅನುಕೂಲವಾಗುವಂತೆ ಮತ್ತು ಸಾರ್ವಜನಿಕರಿಗೆ ಸೂಕ್ತ ಮಾಹಿತಿಯನ್ನು ಒದಗಿಸಲು ಎಲ್ಲ ತಾಲ್ಲೂಕು ತಹಶೀಲ್ದಾರರ ಕಾರ್ಯಾಲಯದಲ್ಲಿ ದಿನ 24 ಗಂಟೆಗಳ ಕಂಟ್ರೋಲ್ ರೂಮ್ ಸ್ಥಾಪಿಸಬೇಕು. ಈ ಕಂಟ್ರೋಲ್ ರೂಮ್‍ಗಳು ಜಿಲ್ಲಾಮಟ್ಟದ ಕಂಟ್ರೋಲ್ ರೂಮ್ ಜತೆಗೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು. ಸಂಬಂಧಿಸಿದ ನೋಡಲ್ ಅಧಿಕಾರಿಗಳು ತಮಗೆ ನಿಯೋಜಿಸಲಾದ ತಾಲ್ಲೂಕುಗಳಿಗೆ ತೆರಳಿ ತಾಲ್ಲೂಕು ಮಟ್ಟದಲ್ಲಿ ಸಭೆಯನ್ನು ನಡೆಸುವ ಮೂಲಕ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಹಿತಿಯನ್ನು ನೀಡಬೇಕು ಎಂದರು.

*ಜಲಾಶಯ ಮಟ್ಟದ ಮೇಲೆ ನಿರಂತರ ನಿಗಾ*
—————————–
ಜಿಲ್ಲೆಯ ಹಾಗೂ ನೆರೆಯ ಮಹಾರಾಷ್ಟ್ರದ ಜಲಾಶಯಗಳ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಜಲಾಶಯ ಮಟ್ಟ ಹಾಗೂ ನೀರು ಬಿಡುಗಡೆ ಬಗ್ಗೆ ಪರಸ್ಪರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ಜಲಾಶಯಗಳಿಂದ ನೀರು ಬಿಡುಗಡೆ ಕುರಿತು ಮುಂಚಿತವಾಗಿಯೇ ಜನರಿಗೆ ತಿಳಿಸುವ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಇದರಿಂದ ಸಮಸ್ಯೆಗಳು ಉಂಟಾಗದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು. ಈ ಬಾರಿ ಕೋವಿಡ್ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿರುವುದರಿಂದ ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪರಿಹಾರ ಕೇಂದ್ರ ನಿರ್ವಹಣೆಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಪರಿಹಾರ ಕೇಂದ್ರಗಳಲ್ಲಿ ಸೂಕ್ತ ಅಂತರ ಕಾಯ್ದುಕೊಳ್ಳುವುದು; ಮಾಸ್ಕ್, ಸ್ಯಾನಿಟೈಸರ್ ವಿತರಣೆಗೆ ಕ್ರಮ ವಹಿಸಲು ತಿಳಿಸಿದರು.
ಮಳೆಗಾಲದಲ್ಲಿ ರಸ್ತೆಬದಿಯ ಮರಗಳು ಬಿದ್ದು ಸಂಚಾರಕ್ಕೆ ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಆದ್ದರಿಂದ ಮಳೆಗಾಲ ಆರಂಭವಾಗುವುದಕ್ಕೆ ಮುಂಚೆಯೇ ಈ ಬಗ್ಗೆ ಗಮನಹರಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ. ಬೂಬಾಲನ್ ತಿಳಿಸಿದರು. ತುರ್ತು ಪರಿಸ್ಥಿತಿಯಲ್ಲಿ ಜನರ ರಕ್ಷಣೆಗೆ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಹಾಗೂ ತಾಲೂಕಿಗೊಂದರಂತೆ ತಂಡಗಳನ್ನು ರಚಿಸಿರುವ ಬಗ್ಗೆ ಸಭೆಯಲ್ಲಿ ಉಪಸ್ಥಿತರಿದ್ದ ಅಗ್ನಿಶಮಕ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ತಹಶೀಲ್ದಾರ ಎಸ್.ಎಸ್.ನಾಯ್ಕಲಮಠ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು, ಹಾಗೂ ವಿಪತ್ತು ನಿರ್ವಹಣಾ ಪರಣಿತ ಬಾಹುಬಲಿ ಕೊಂಡಾಳಿ ಉಪಸ್ಥಿತರಿದ್ದರು.

";