ಬೆಂಗಳೂರು: “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಟೀಕೆ ಮಾಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರುನಿಮ್ಮ ಬಗ್ಗೆ ಹೇಳಿದ್ದಾರೆ ಎಂದಾಗ, “ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ ಎಂದರು.
ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು.
ಪೆನ್ ಡ್ರೈವ್ ವಿಚಾರದಲ್ಲಿ ಅಂದು ಮಹಾನಾಯಕ ಎಂದು ಟೀಕೆ ಮಾಡಿದ್ದ ಕುಮಾರಸ್ವಾಮಿ ಅವರು ಇಂದು ತಮ್ಮನ್ನು ತಿಮಿಂಗಿಲ ಎಂದು ಹೇಳಿರುವ ಬಗ್ಗೆ ಮಾಧ್ಯಮದವರು ಪ್ರಶ್ನೆಗೆ ಉತ್ತರಿಸಿದರು. “ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.