ಬಾಗಲಕೋಟೆ
ಮತದಾನದಲ್ಲಿ ಪ್ರಕ್ರಿಯೆಯಲ್ಲಿ ಮತದಾರರು ಭಾಗವಹಿಸಿ, ತಮ್ಮ ಮತದಾನದ ಹಕ್ಕು ಚಲಾಯಿಸಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಜಾನಕಿ ಕೆ.ಎಂ ಅವರು ಕರೆ ನೀಡಿದರು.
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಭಾನುವಾರ ಜಿಲ್ಲಾಡಳಿತ ಭವನದ ಆವರಣದಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿಗಾಗಿ ಬೃಹತ್ ಕಾಲ್ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿಗಳಾದ ಶಶಿಧರ ಕುರೇರ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮೇ 7 ರಂದು ನಡೆಯುವ ಮತದಾನದ ದಿನ ಮತಗಟ್ಟೆಗೆ ಬಂದು ಮತಚಲಾಯಿಸಿ,ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು.ಈ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾದ್ಯಂತ ವಿಭಿನ್ನ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮತದಾರರು ತಮ್ಮ ಮತ ಹಕ್ಕು ಚಲಾಯಿಸಬೇಕು. ಜಿಲ್ಲಾದ್ಯಂತ ಮತಗಟ್ಟೆಗಳನ್ನು ಸಜ್ಜುಗೊಳಿಸಿದ್ದು ಮತದಾನ ದಿನ ತಪ್ಪದೇ ಮತದಾರರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು.
ಚುನಾವಣೆಗಳು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಎಲ್ಲರೂ ತಮ್ಮ ಬಹುಮೂಲ್ಯ ಮತದಾನದ ಹಕ್ಕು ಚಲಾಯಿಸಿ,ಯಾರೂ ಈ ಮತದಾನದಿಂದ ದೂರ ಉಳಿಯದೇ ಮತಗಟ್ಟೆಗಳಿಗೆ ಆಗಮಿಸಿ ಮತ ಹಕ್ಕು ಚಲಾಯಿಸಬೇಕು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರು ಮಾತನಾಡಿ ಮತದಾನ ಪವಿತ್ರ ಕಾರ್ಯವಾಗಿದೆ. ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ,ತಮ್ಮ ಮತ ಚಲಾಯಿಸಿ ಎಂದು ಹೇಳಿದರು.
ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಶಶಿಧರ ಕುರೇರ ಮಾತನಾಡಿ, ಜಿಲ್ಲೆಯಲ್ಲಿ ಹಲವಾರು ಸ್ವೀಪ್ ಕಾರ್ಯ ಚಟುವಟಿಕೆಗಳ ರೂಪುರೇಷೆ ಸಿದ್ಧಪಡಿಸಿಕೊಂಡು ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಮತದಾರರು ತಮಗೆ ದೊರೆತಿರುವ ಹಕ್ಕನ್ನು ಮತದಾನ ದಿವಸ ಮತಗಟ್ಟೆಗೆ ಬಂದು ಮತದಾನ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿಗಳಾದ ಅಮರೇಶ ನಾಯಕ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ,ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟೆ ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು,ವಿವಿಧ ಕಾಲೇಜಿನ ವಿದ್ಯಾರ್ಥಿಗಳು ನಗರಸಭೆ ಅಧಿಕಾರಿ, ಸಿಬ್ಬಂದಿ ಕಾಲ್ನಡಿಗೆ ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.
ಕಾಲ್ನಡಿಗೆ ಜಾಥವು ಜಿಲ್ಲಾ ಆಡಳಿತ ಭವನದಿಂದ ಆರಂಭಗೊಂಡು, ನವನಗರ ಬಸ್ ನಿಲ್ದಾಣ, ಎಲ್ ಐಸಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ಭವನ, ಜಿಲ್ಲಾ ಕ್ರೀಡಾಂಗಣದವರೆಗೆ ನಡೆಯಿತು.
*ಪ್ರತಿಜ್ಞಾ ವಿಧಿ ಸ್ವೀಕಾರ:*
ಜಿಲ್ಲಾ ಚುನಾವಣಾಧಿಕಾರಿಗಳೂ ಅದ ಜಿಲ್ಲಾಧಿಕಾರಿ ಜಾನಕಿ ಕೆ.ಎಂ.ಅವರು ಮತದಾನ ಪ್ರತಿಜ್ಞಾ ವಿಧಿ ಬೋಧಿಸಿದರು. ಮತದಾನ ಜಾಗೃತಿಯ ಬೃಹತ್ ನಡಿಗೆಯಲ್ಲಿ ಪಾಲ್ಗೊಂಡಿದ್ದವರೆಲ್ಲ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.