ಶಿವಮೊಗ್ಗ: ಕೆಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಲಿ ಎಂಬ ಅಭಿಪ್ರಾಯವನ್ನು ಪುನರುಚ್ಚರಿಸಿದ್ದು, ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್ಐಟಿ ರಚನೆ ಮಾಡಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದರು.
ಮಂಡ್ಯದ ಹಾಲಿ ಸಂಸದೆ ಸುಮಲತಾ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಿಲ್ಲ. ಕಳೆದ ಬಾರಿಯ ಚುನಾವಣೆಯಲ್ಲಿ ಅವರ ಪ್ರಚಾರ ಮಾಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಸುಮಲತಾ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದ್ದರು ಮಿತ್ರಪಕ್ಷ ಜೆಡಿಎಸ್ ಪರ ಪ್ರಚಾರ ಮಾಡದೇ ಹೋದದ್ದು ಕುತೂಹಲ ಮೂಡಿಸಿತ್ತು. ಈ ಬಗ್ಗೆ ಶಿವಮಗ್ಗದಲ್ಲಿ ಕುಮಾರಸ್ವಾಮಿ ಮತ್ತೊಮ್ಮೆ ಪ್ರತಿಕ್ರಿಯೆ ನೀಡಿದ್ದು, ಮಂಡ್ಯದಲ್ಲಿ ಪ್ರಚಾರಕ್ಕೆ ಆಹ್ವಾನಿಸಿದರೂ ಸುಮಲತಾ ಬರಲಿಲ್ಲ ಎಂದು ವಿಶ್ಲೇಷಿಸಿದರು.
ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ತನಗೆ ಹೇಗೆ ಗೊತ್ತು ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದ್ದು, ಇದೆ ವೇಳೆ, ರಾಜ್ಯದಲ್ಲಿ ಶುಕ್ರವಾರ ಚುನಾವಣೆ ಆದ 14 ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ 13 ಸ್ಥಾನಗಳು ಸಿಗಲಿವೆ ಎನ್ನುವ ವಿಶ್ವಾಸವನ್ನು ವ್ಯಕ್ತಪಡಿಸಿದರು.