ಬೆಂಗಳೂರು: ಪ್ರಧಾನಿ ಮೋದಿ ಬಗ್ಗೆ ಮಾತನಾಡುವ ಸಿಎಂ ಸಿದ್ದರಾಮಯ್ಯ ಅವರ ಗರ್ವಭಂಗವಾಗಬೇಕು ಎಂದು ಶಪಥ ಮಾಡಿದ್ದ ಎಚ್‌ಡಿ ದೇವೇಗೌಡ ಅವರಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನನ್ನದು ಗರ್ವ, ಅಹಂಕಾರ ಅಲ್ಲ. ಕನ್ನಡಿಗರ ರಕ್ತದಲ್ಲಿರುವ ಸ್ವಾಭಿಮಾನ ಎಂದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ” ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ” ಎಂದರು.
” ದೇವೇಗೌಡರ ಜೊತೆ ರಾಜಕೀಯವಾಗಿ ನನಗೆ ಭಿನ್ನಾಭಿಪ್ರಾಯವಿದ್ದರೂ. ನಮ್ಮ ನೆಲ, ಜಲ ಮತ್ತು ಭಾಷೆಯ ರಕ್ಷಣೆಯ ಬಗೆಗಿನ ಅವರ ನಿಲುವಿನ ಬಗ್ಗೆ ಗೌರವ ಇತ್ತು. ಆದರೆ ಕಳೆದ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕರ್ನಾಟಕದ ಹಿತಾಸಕ್ತಿಯ ವಿರುದ್ಧವೇ ಕೆಲಸ ಮಾಡಿದೆ. ನಾಡಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆ, ಕಾವೇರಿ, ಕೃಷ್ಣ, ಮಹದಾಯಿ ಜಲವಿವಾದಗಳಲ್ಲಿ ಅನ್ಯಾಯ, ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗ ಯುವಜನರಿಗೆ ವಂಚನೆ…ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ದ್ರೋಹ ಎಸಗುತ್ತಾ ಬಂದಿದೆ. ಹೀಗಿದ್ದರೂ “ದೇಶದ ಎಲ್ಲ ಸಮಸ್ಯೆಗಳಿಗೆ ಮೋದಿ ಮತ್ತು ಶಾ ಬಳಿ ಪರಿಹಾರ ಇದೆ” ಎಂದು ಹೇಳುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯಾದರೂ ನಿಮ್ಮನ್ನು ಚುಚ್ಚಲಿಲ್ಲವೇ?” ಎಂದು ಪ್ರಶ್ನೆ ಮಾಡಿದರು.
ದೇವೇಗೌಡರೇ, ವೈಯಕ್ತಿಕ ಇಲ್ಲವೆ ರಾಜಕೀಯ ಲಾಭಕ್ಕಾಗಿ ನಾನು ಯಾರ ಜೊತೆಯಲ್ಲಿಯೂ ರಾಜಿ ಮಾಡಿಕೊಳ್ಳಲಾರೆ, ಅಂತಹ ಪರಿಸ‍್ಥಿತಿ ಬಂದೊದಗಿದರೆ ರಾಜಕೀಯವಾಗಿ ನಿವೃತ್ತಿಯಾಗುತ್ತೇನೆ ವಿನ: ಕರ್ನಾಟಕದ ಹಿತಾಸಕ್ತಿಯ ವಿರೋಧಿಗಳ ಜೊತೆಯಲ್ಲಿ ನಿಮ್ಮಂತೆ ಹೊಂದಾಣಿಕೆ ಮಾಡಿಕೊಳ್ಳಲಾರೆ ” ಎಂದು ಸೂಚಿಸಿದರು.