ಬೆಂಗಳೂರು:
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮಿಚುಂಗ್ ಚಂಡಮಾರುತದ ಪರಿಣಾಮದಿಂದಾಗಿ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಭಾಗದ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಹೀಗಾಗಿ ರಾಜ್ಯದ ಹಲವು ಕಡೆ ಮಂಗಳವಾರ (ಡಿ. 5) ಭಾರಿ ಮಳೆಯಾಗುವ (Rain News) ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ (karnataka Weather Forecast) ನೀಡಿದೆ. ಅಲ್ಲದೆ, ಗಾಳಿಯ ವೇಗವೂ ಹೆಚ್ಚಳಗೊಳ್ಳಲಿದ್ದು, ಪ್ರತಿ ಗಂಟೆಗೆ 30 ಕಿ.ಮೀ. ವೇಗದಲ್ಲಿ ಬೀಸಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಮಿಚುಂಗ್ ಸೈಕ್ಲೋನ್ ತೀವ್ರಗೊಳ್ಳುವ ನಿರೀಕ್ಷೆ ಇದೆ. ಹೀಗಾಗಿ ರಾಜ್ಯದಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಸದ್ಯ ಬಂಗಾಳ ಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದರಿಂದ ಕರ್ನಾಟಕದ ಕೆಲವು ಕಡೆ ಎಚ್ಚರ ವಹಿಸಲು ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸೋಮವಾರ ರಾತ್ರಿ ಸಹಿತ ಇನ್ನು ಎರಡು ಮೂರು ದಿನ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಕಲಬರಗಿ, ಯಾದಗಿರಿ ಹಾಗೂ ಬೀದರ್ ಭಾಗದ ಒಂದೆರಡು ಕಡೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸಮಯ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗಬಹುದು. ಉಳಿದ ಜಿಲ್ಲೆಗಳಲ್ಲಿ ಅಲ್ಪ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಹೆಚ್ಚಿರಲಿದ್ದು, ಅಲ್ಪದಿಂದ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇದೆ.
ಉತ್ತರ ಒಳನಾಡಿನ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಒಣ ಹವೆ ಮುಂದುವರಿಯಲಿದೆ.
ಕರಾವಳಿಯಲ್ಲಿ ಎಫೆಕ್ಟ್?
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡದಲ್ಲಿ ಚಂಡಮಾರುತದ ಭಾರಿ ಪ್ರಭಾವ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಲ್ಲಲ್ಲಿ ಭಾರಿ ಮಳೆಯಾಗಬಹುದು ಎಂದು ಹಮಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕನಿಷ್ಠ ತಾಪಮಾನ ಏರಿಕೆ
ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರುವುದರಿಂದ ಮುಂದಿನ 48 ಗಂಟೆಯಲ್ಲಿ ಕನಿಷ್ಠ ಉಷ್ಣಾಂಶವು ಒಳನಾಡಿನ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ. ಇನ್ನು ಬಹುತೇಕ ಕಡೆ ರಾತ್ರಿ ವೇಳೆಗೆ ಚಳಿಗಾಳಿ ಬೀಸಲಿದೆ.
ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಬೆಂಗಳೂರು ನಗರ: 25 ಡಿ.ಸೆ -19 ಡಿ.ಸೆ
ಮಂಗಳೂರು: 35 ಡಿ.ಸೆ – 21 ಡಿ.ಸೆ
ಚಿತ್ರದುರ್ಗ: 30 ಡಿ.ಸೆ – 19 ಡಿ.ಸೆ
ಗದಗ: 32 ಡಿ.ಸೆ – 19 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 33 ಡಿ.ಸೆ – 22 ಡಿ.ಸೆ
ಬೆಳಗಾವಿ: 31 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 22 ಡಿ.ಸೆ