ನಿಮ್ಮ ಸುದ್ದಿ ಬಾಗಲಕೋಟೆ
ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ಬರುವ ಕೊಪ್ಪಳ ಏತ ನೀರಾವರಿ ಯೋಜನೆ ಶೀಘ್ರದಲ್ಲಿ ಲೋಕಾರ್ಪಣೆ ಗೊಳ್ಳಲಿದೆ ಎಂದು ಜಲಸಂನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ನೂತನ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು ಕೃಷ್ಣ ಮೇಲ್ದಂಡೆ ಯೋಜನೆಯ ಮೊದಲ ಹಂತದ ಕೆಲಸ ಮುಗಿದಿದ್ದು, ವಿದ್ಯುತ್ ಕೆಲಸ ಮಾತ್ರ ಬಾಕಿ ಇರುತ್ತದೆ. ವಿದ್ಯುತಗೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು ಇನ್ನು 1 ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದಾರೆ ಎಂದರು.
ಮೊದಲ ಹಂತದಲ್ಲಿ 1109 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರಾರಂಭಿಸಲಾಗಿದ್ದು, 1.12 ಲಕ್ಷ ಹೆಕ್ಟೆರ್ ಭೂಮಿಗೆ ನೀರುಣಿಸುವ ಯೋಜನೆ ಇದಾಗಿದೆ. ಜಿಲ್ಲೆಯ ಹುನಗುಂದ ತಾಲೂಕು ಸೇರಿದಂತೆ ಕೊಪ್ಪಳ ಜಿಲ್ಲೆಯ ಕೆಲವು ತಾಲೂಕುಗಳಿಗೆ ಸದುಪಯೋಗವಾಗಲಿದೆ ಎಂದು ತಿಳಿಸಿದರು.
ಈ ಯೋಜನೆಗೆ 2012 ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಕಾಲದಲ್ಲಿ ಅಡಿಗಲ್ಲು ಹಾಕಲಾಗಿತ್ತು. ಈ ಯೋಜನೆ ಕಾರ್ಯಗತಗೊಳ್ಳಲು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಇತರೇ ಜನಪ್ರತಿನಿಧಿಗಳು ಪ್ರಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.
ಎರಡನೇ ಹಂತದಲ್ಲಿ 3 ಪ್ಯಾಕೇಜ ಇದೆ. ಈ ಹಂತದಲ್ಲಿ 86 ಕೆರೆ ತುಂಬಿಸಲಾಗುತ್ತಿದ್ದು, ಈಗಾಗಲೇ 43 ಕೆರೆಗಳು ತುಂಬಿಸಲು ಕನೆಕ್ಷನ ಮುಗಿದಿದೆ. ನಮ್ಮ ಸರಕಾರ ನೀರಾವರಿ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡಲಾಗುತ್ತಿದೆ. ಕೆರೆ ತುಂಬಿಸುವದರಿಂದ ಅಂತರ್ಜಲ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ಯ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಇತರರು ಉಪಸ್ಥಿತಿತರಿದ್ದರು.