ಮಂಗಳೂರು: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರು ಪ್ರಶ್ನಿಸಿದರು.
ಶಾಸಕ ಹರೀಶ್ ಪೂಂಜಾ ಅವರು ಪೊಲೀಸರಿಗೆ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿತ್ತು. ಅವರನ್ನು ಪೊಲೀಸರು ಅವರನ್ನು ಬಂಧನ ಮಾಡಲು ತೆರಳಿದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಅದಕ್ಕೆ ಅವಕಾಶ ನೀಡಿರಲಿಲ್ಲ ಎಂದರು.
ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.