ಬಾಗಲಕೋಟೆ:
ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಜಿಲ್ಲಾಧಿಕಾರಿಗಳ ವಸತಿ ಗೃಹದ ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಶಾಸಕ ಎಚ್.ವಾಯ್.ಮೇಟಿ ರವಿವಾರ ಚಾಲನೆ ನೀಡಿದರು.
ಪೌರಾಡಳಿತ ನಿರ್ದೇಶನಾಲಯ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆವರಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲಾಧಿಕಾರಿಗಳ ವಸತಿ ಗೃಹದ ರಸ್ತೆಯನ್ನು ಸ್ವಚ್ಛಗೊಳಿಸಿದರು.
ಸ್ಚಚ್ಛತಾ ಕಾರ್ಯದಲ್ಲಿ ಶಾಸಕ ಎಚ್.ವಾಯ್.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಸೇರಿದಂತೆ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿ.ಪಂ ಸಿಇಓ ಶಶಿಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
*ವಿವಿದೆಡೆ ಸ್ವಚ್ಚತಾ ಕಾರ್ಯ*
——————
ದಕ್ಷಿಣ ಕಾಶಿ ಎಂದೆ ಪ್ರಸಿದ್ದಿ ಪಡೆದ ಮಹಾಕೂಟ ಕ್ಷೇತ್ರದ ಸ್ಚಚ್ಛತಾ ಕಾರ್ಯಕ್ರಮಕ್ಕೆ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು. ಜಿ.ಪಂ ಸಿಇಓ ಶಶಿಧರ ಕುರೇರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ದೇವಸ್ಥಾನದ ಸುತ್ತಮುತ್ತಲಿನ ಆಚರಣ, ಪ್ರಸಾದ ನಿಲಯ, ಪುಷ್ಕರಣಿ, ಮುಖ್ಯ ರಸ್ತೆ ಸೇರಿದಂತೆ ಇತರೆ ಸ್ಥಳಗಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಜಿಲ್ಲಾ ಅಗ್ನಿಶಾಮಕ ಠಾಣೆ ಆವರಣ, ಜಿಲ್ಲೆಯಲ್ಲಿರುವ ವಿವಿಧ ನ್ಯಾಯಬೆಲೆ ಅಂಗಡಿಗಳ ಸುತ್ತಮುತ್ತ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ ವಸತಿ ನಿಲಯ, ಜಿಲ್ಲಾ ಆಸ್ಪತ್ರೆಗಳ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.