ಲೊಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುಂಚೆ ಪ್ರಧಾನಿ ನರೇಂದ್ರ ಮೋದಿ ಭಾರತ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದು, ಮುಂದಿನ 10 ದಿನಗಳಲ್ಲಿ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಶನಿವಾರ ಬಿಜೆಪಿ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪ್ರಧಾನಿ ಮೋದಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಗೆ ಭೇಟಿ ನೀಡಲಿದ್ದು, ಆದಿಲಾಬಾದ್ ಹಾಗೂ ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಮೋದಿ ಪಶ್ಚಿಮ ಬಂಗಾಳಕ್ಕೆ ತೆರಳುವ ಮೊದಲು ಒಡಿಶಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ 6ರಂದು ಅವರು ಕೋಲ್ಕತ್ತಾದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಬರಾಸತ್ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಇದಾದ ಬಳಿಕ ಮೋದಿ ಬಿಹಾರಕ್ಕೆ ತೆರಳಿ ಬೆಟ್ಟಿಯಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
ಮಾರ್ಚ್ 5 ರಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಪ್ರಧಾನಿ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದಾದ ಬಳಿಕ ಒಡಿಶಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.