ಬೆಂಗಳೂರು: ಕರ್ನಾಟಕ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಗ್ಯಾರಂಟಿಯಿಂದ ಬೊಕ್ಕಸ ಖಾಲಿ ಎಂಬ ಹೇಳಿಕೆ ನಿಜವಾಗಿಯೂ ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ಬಹಿರಂಗ ಚರ್ಚೆಗೆ ಬರಲಿ ಎಂಬ ಸವಾಲು ಹಾಕಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು ಎಂದರು.
ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕಿದ್ದು, ಈ ಮೂಲಕ ತಮ್ಮ ದಮ್ಮು, ತಾಕತ್ತು ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ? ಇದೀಗ ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ‘ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸ ಖಾಲಿಯಾಗಿದೆ’ ಎಂದು ನಮ್ಮ ಸರ್ಕಾರದ ಬಗ್ಗೆ ಇರುವ ಈರ್ಷ್ಯೆಯನ್ನು ಹೊರಹಾಕಿದ್ದಾರೆ ಎಂದು ತಿಳಿಸಿದರು.
ಇದು ಅಮಿತ್ ಶಾ ಅವರ ಖಚಿತ ಅಭಿಪ್ರಾಯವಾಗಿದ್ದರೆ ಅವರು ನನ್ನ ಜೊತೆ ಬಹಿರಂಗ ಚರ್ಚೆಯಲ್ಲಿ ಪಾಲ್ಗೊಳ್ಳಲಿ. ಗ್ಯಾರಂಟಿ ಯೋಜನೆಗಳಿಂದ ನಮ್ಮ ಖಜಾನೆ ಬರಿದಾಗಿಲ್ಲ ಬದಲಿಗೆ ತೆರಿಗೆ ಹಂಚಿಕೆ ಮತ್ತು ಅನುದಾನ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎನ್ನುವುದನ್ನು ನಾನು ಸಾಬೀತು ಮಾಡಬಲ್ಲೆ. ಇದು ಅಮಿತ್ ಶಾ ಅವರಿಗೆ ನನ್ನ ಸವಾಲು ಕೂಡಾ ಹೌದು ಎಂದು ಸೂಚಿಸಿದರು.