ಬಾಗಲಕೋಟೆ
ಹೆಣ್ಣು ಮಕ್ಕಳ ವಿಕಾಸಕ್ಕೆ ಅಡ್ಡಿಯಾಗುತ್ತಿರುವ ಮೂಡ ನಂಬಿಕೆಗಳಿಂದ ಹೆಣ್ಣು ಮಗುವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಹೇಳಿದರು.
ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಹಮ್ಮಿಕೊಂಡ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣು ಭ್ರೂಣಹತ್ಯೆ, ಬಾಲ್ಯವಿವಾಹ ನಿಷೇಧ, ಪೋಸ್ಕೋ ಕಾಯ್ದೆಗಳ ಬಗ್ಗೆ ಜಾಗೃತಿ ಅಗತ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡಿ ಸಾಗಾಣಿಕೆ ಮಾಡುತ್ತಿರುವ ಪ್ರಸಂಗಗಳನ್ನು ನೋಡುತ್ತಿದ್ದೇವೆ. ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು. ಮುಖ್ಯವಾಗಿ ಗಂಡಾಗಲಿ, ಹೆಣ್ಣಾಗಲಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. 18 ವರ್ಷದ ನಂತರವೇ ಹೆಣ್ಣು ಮಕ್ಕಳಿಗೆ ಮದುವೆಯಾಗಬೇಕು. ಈ ಬಗ್ಗೆ ವಿದ್ಯಾರ್ಥಿನಿಯರು ಜಾಗೃತರಾಗಬೇಕಿದೆ ಎಂದರು.
ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಸಮಾಜದಲ್ಲಿ ಲಿಂಗ ತಾರತಮ್ಯ ಹೋಗಲಾಡಿಸಬೇಕಾದರೆ, ಹೆಣ್ಣು, ಗಂಡಿನ ನಡುವಿನ ಬೇದಭಾವ ಹೋಗಲಾಡಿಸಿ ಇಬ್ಬರು ಸಮಾನರು ಎಂಬ ಭಾವನೆ ಬರಬೇಕು. ಹೆಣ್ಣು ಮಕ್ಕಳಿಗೆ ಸಮಾನ ಸ್ಥಾನಮಾನ ದೊರೆಯಲು ಉತ್ತಮ ಶಿಕ್ಷಣ ಕೊಡುವುದು ಅಗತ್ಯವಾಗಿದೆ. ಹೆಣ್ಣು ಮಕ್ಕಳು ಸಮಾಜದಲ್ಲಿ ಬಾಲ್ಯವಿವಾಹದ ಸಂಕೋಲೆಗೆ ಒಳಗಾಗಬಾರದು. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಾಯ ಪಡೆದು ರಕ್ಷಣೆ ಮಾಡಿಕೊಳ್ಳಬಹುದಾಗಿದೆ ಎಂದರು.
ಪ್ರಸವಪೂರ್ವ, ಭ್ರೂಣಲಿಂಗಪತ್ತೆ, ಬಾಲ್ಯವಿವಾಹ, ವರದಕ್ಷಿಣೆಯಂತಹ ಸಾಮಾಜಿಕ ಪಿಡುಗಳನ್ನು ತೊಡೆದು ಹಾಕಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ. ಇದಕ್ಕೆ ಸಾರ್ವಜನಿಕರು ಸಹ ಕೈ ಜೋಡಿಸಬೇಕಿದೆ. ಹೆಣ್ಣು ಮಗುವಿನ ಜನನದಿಂದ ಗೌರವ ಮನೋಭಾವನೆ ಬೆಳೆಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹೆಣ್ಣಮಕ್ಕಳನ್ನು ಸನ್ಮಾನಿಸಲಾಯಿತು. ಅಲ್ಲದೇ ಬೇಟಿ ಬಚಾವೋ ಬೇಡಿ ಪಡಾವೋ ಯೋಜನೆಯ ಪೋಸ್ಟರ ಬಿಡುಗಡೆ ಮಾಡಲಾಯಿತು.
ಮಕ್ಕಳೊಂದಿಗೆ ಸೆಲ್ಪಿ ಡಿಜಿಟಲ್ ಅಭಿಯಾನಕ್ಕೂ ಸಹಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅದ್ಯಕ್ಷ ಗುಲಾಬ್ ನದಾಫ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜಶೇಖರ ಪಟ್ಟಣಶೆಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪಿ.ಬಿ.ಜೇವೂರ, ಜಾಲಿಹಾಳದ ನೂತನ ಪ್ರೌಢಶಾಲೆಯ ಮುಖ್ಯೋಪಾದ್ಯಾಯಿ ಜಯಶ್ರೀ ಬಂಡಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಅಮರೇಶ ಎಚ್, ಹಿರಿಯ ಸಹಾಯಕ ನಿರ್ದೇಶಕಿ ಸುಮಂಗಲಾ ಹಿರೇಮನಿ, ಬಾಲಕಿಯರ ಬಾಲಮಂದಿರದ ಅಧೀಕ್ಷಕಿ ಜಯಮಾಲಾ ದೊಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.