ಬೆಂಗಳೂರು: ರೈತ ವಿರೋಧಿ, ಕಣ್ಣು, ಕಿವಿ, ಹೃದಯ ಇಲ್ಲದ ಕಾಂಗ್ರೆಸ್ ಸರ್ಕಾರ ನರೇಗಾ ಹಣ, ಪಿಂಚಣಿ ಹಣವನ್ನೂ ರೈತರ ಸಾಲಕ್ಕೆ ಜಮೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಬ್ಯಾಂಕ್ ಗಳಿಗೆ ಸೂಚಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಲಿ. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕದ ರೈತರಿಗಾಗಿ 3,454 ಕೋಟಿ ರೂ. ಬರ ಪರಿಹಾರವನ್ನು ಬಿಡುಗಡೆಗೊಳಿಸಿದೆ. ಆದರೆ ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ತನ್ನ ಪಾಲಿನ ಹಣವನ್ನು ನೀಡಿಲ್ಲ. ಕೇಂದ್ರ ಸರ್ಕಾರ ನೀಡಿದ ಹಣವನ್ನು ಕೂಡ ರೈತರಿಗೆ ಸರಿಯಾಗಿ ತಲುಪಿಸಿಲ್ಲ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕೂಡಲೇ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ರೈತರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚನೆ ನೀಡಲು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಬೇಕು. ಬ್ಯಾಂಕ್ ಗಳು ಒಪ್ಪದಿದ್ದರೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಆರ್. ಅಶೋಕ್ ಒತ್ತಾಯಿಸಿದರು.
ಈ ಪರಿಹಾರದ ಹಣವನ್ನು ಹಳೆ ಬಾಕಿಗಳಿಗೆ ಬ್ಯಾಂಕುಗಳು ಜಮೆ ಮಾಡುತ್ತಿದ್ದರೂ ರಾಜ್ಯ ಸರ್ಕಾರ ತಕ್ಷಣದ ಕ್ರಮ ವಹಿಸದೆ ಕೈ ಕಟ್ಟಿ ಕುಳಿತಿತ್ತು. ಈಗ ಪಿಂಚಣಿ, ನರೇಗಾ ಹಣವೂ ರೈತರ ಕೈ ಸೇರುವಂತೆ ನೋಡಿಕೊಳ್ಳಲು ಸರ್ಕಾರ ವಿಫಲವಾಗಿದೆ. ಈ ಮೂಲಕ ಅನ್ನದಾತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.