ಬೆಳಗಾವಿ: 6,975 ಕೋಟಿ ರೂ. ಮೌಲ್ಯದ 400 ಕಿ.ಮೀ. ರಸ್ತೆ ಕಾಮಗಾರಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯ ವಿವಿಧ ಯೋಜನೆಗಳಿಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಈ ವೇಳೆ ಮಾತನಾಡಿದ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸಚಿವ ನಿತೇನ್ ಗಡ್ಕರಿ ಅವರು ರಸ್ತೆ ಅಭಿವೃದ್ಧಿ ವಿಚಾರದಲ್ಲಿ ಇತಿಹಾಸ ನಿರ್ಮಿಸಿದ್ದು, ಅವರನ್ನು ನೋಡಿದರೆ ಹೆಮ್ಮೆ ಆಗುತ್ತದೆ. ನಿತಿನ್ ಗಡ್ಕರಿ ಅಂದರೆ ಸಡಕ್ ಕೆ ಭಾಷಾ ಎಂದು ಕೊಂಡಾಡಿದ್ದಾರೆ.
ಕೇಂದ್ರ ರಾಜ್ಯದಲ್ಲಿ ಬೇರೆ ಬೇರೆ ಪಕ್ಷಗಳ ಸರ್ಕಾರ ಇದ್ದಾಗ ದ್ವೇಷದ ಭಾವನೆ ಇರುತ್ತದೆ. ಆದರೆ ನಿತಿನ್ ಗಡ್ಕರಿ ಅವರ ಸಚಿವಾಲಯದಲ್ಲಿ ಹಾಗಾಗಿಲ್ಲ. ಅದು ನಮಗೆ ನಮ್ಮದೇ ಸರ್ಕಾರ ಎನ್ನುವ ಭಾವನೆ ಬರುತ್ತದೆ. ಪಕ್ಷಕ್ಕಿಂತ ರಸ್ತೆ ಅಭಿವೃದ್ಧಿ ಕಾರ್ಯ ಮುಖ್ಯ. ಇದೇ ಕಾರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಬಿಜೆಪಿ, ಕಾಂಗ್ರೆಸ್ ಶಾಸಕರಿಗೆ ಸಮಾನ ಅನುದಾನ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುತ್ತಾರೆ. ಕಳೆದ 9 ತಿಂಗಳಲ್ಲಿ 5 ಬಾರಿ ಗಡ್ಕರಿ ಅವರನ್ನ ಭೇಟಿ ಮಾಡಿರುವೆ. ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನ ಕಾರ್ಯರೂಪಕ್ಕೆ ತರಲು ಸೂಚಿಸಿದ್ದಾರೆ. ಅದರಲ್ಲಿ ಕೆಲವೊಂದಿಷ್ಟು ಕಾಮಗಾರಿ ಆರಂಭ ಮಾಡಿದ್ದೇವೆ ಎಂದು ತಿಳಿಸಿದರು.