ಬೆಂಗಳೂರು: ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವ್ಯಕ್ತಿಯೊಬ್ಬ ಮೃತಪಟ್ಟು, ಹಲವರು ಅಸ್ವತ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.
ಕಲುಷಿತ ನೀರು ಸೇವನೆಯಿಂದ ಓರ್ವ ಯುವಕ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಕೆ ಸಾಲುಂಡಿ ಗ್ರಾಮದಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕನಕರಾಜು (20) ಎಂಬ ಓರ್ವ ಯುವಕ ಸಾವನ್ನಪ್ಪಿದ್ದಾನೆ ಎಂದರು.
ಸೋಮವಾರ ತೀವ್ರ ವಾಂತಿ ಬೇದಿಯಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಕನಕರಾಜು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಘಟನೆಯ ಬೆನ್ನಲ್ಲೇ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇದೀಗ ಅಸ್ವಸ್ಥಗೊಂಡವರಿಗೆ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.