ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ, ಈ ಆಧಾರದಲ್ಲಿ ಹೇಳುತ್ತೇನೆ. ಡಿಕೆ ಸುರೇಶ್ ಅವರು ಗೆಲುವು ಶತಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೇವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ ಎಂದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಡಿಕೆ ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ. ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.
ನಾವು ನಮ್ಮ ಗ್ಯಾರಂಟಿ ಯೋಜನೆಗಳ ಮೂಲಕ ನೇರವಾಗಿ ಕನ್ನಡ ನಾಡಿನ ಜನತೆಯ ಖಾತೆಗೆ ಹಣ ಜಮೆ ಮಾಡುತ್ತಿದ್ದೇವೆ. ಶೂದ್ರರು, ದಲಿತರು, ಮಹಿಳೆಯರು, ಶ್ರಮಿಕರು, ದುಡಿಯುವ ವರ್ಗಗಳ ಎಲ್ಲರ ಮನೆ ಮನೆಯನ್ನೂ ನಮ್ಮ ಗ್ಯಾರಂಟಿಗಳು ತಲುಪಿವೆ. ಇದು ನಮ್ಮ ಬದ್ಧತೆ. ನೀವು ಕೊಟ್ಟ ಒಂದೊಂದು ಓಟಿಗೂ ಘನತೆ ತಂದಿದ್ದೇವೆ ಎಂದು ಹೇಳಿದರು.