ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಬಿಗ್ ರಿಲೀಫ್ ನೀಡಿದ್ದು, ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ 120B ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸರ್ವೋಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ಇದರಿಂದಾಗಿ ಇದೀಗ ಡಿಕೆ ಶಿವಕುಮಾರ್ ಜಾರಿ ನಿರ್ದೇಶನಾಲಯದ ತನಿಖೆಯಿಂದ ನಿರಾಳರಾಗುವಂತಾಗಿದೆ.ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ನೀಡಿದ್ದ ತೀರ್ಪಿನಲ್ಲೇನಿತ್ತು? ಸುಪ್ರೀಂ ಹೇಳಿದ್ದೇನು?
ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ 2019ರ ಆಗಸ್ಟ್ನಲ್ಲಿ ಹೈಕೋರ್ಟ್ ತೀರ್ಪು ನೀಡಿತ್ತು. ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿರುವ 120B (ಕ್ರಿಮಿನಲ್ ಪಿತೂರಿ) ಪ್ರಕರಣ ಪಿತೂರಿಯ ಭಾಗವಾಗಿದೆ ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಸಿ ಡಿಕಡ ಶಿವಕುಮಾರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾ. ಸೂರ್ಯಕಾಂತ್ ಪೀಠ, ಈ ಕೇಸ್ ಕ್ರಿಮಿನಲ್ ಪಿತೂರಿಯ (120B) ಭಾಗವಾಗಿಲ್ಲ. ಹೀಗಾಗಿ ಅಕ್ರಮ ಹಣ ವರ್ಗಾವಣೆ ಕೇಸ್ ಅಡಿಯಲ್ಲಿ ಬರುವುದಿಲ್ಲ. ಹೈಕೋರ್ಟ್ ಆದೇಶವನ್ನು ರದ್ದುಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.