ಚಾಮರಾಜನಗರ: ರಾಜ್ಯದಲ್ಲಿ ಶುಕ್ರವಾರ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ.
ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದು, ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ.
ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಇನ್ನು ಘಟನೆಯಲ್ಲಿ ಚುನಾವಣಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹನೂರು ತಹಸೀಲ್ದಾರ್ ದೌಡಾಯಿಸಿ ಪರಿಶೀಲನೆ ನಡೆಸಿದರು.
ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ.
ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.