ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭ
ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ : ಸಚಿವ ನಾಗೇಶ
ನಿಮ್ಮ ಸುದ್ದಿ ಬಾಗಲಕೋಟೆ
ಮಾರ್ಚ 28 ರಿಂದ ಜರುಗಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದ್ದು, ಆಯಾ ಶಾಲೆಯವರು ನಿಗಧಿಗೊಳಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಬರುವುದು ಕಡ್ಡಾಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.
ನಗರದ ನ್ಯೂ ಸಕ್ರ್ಯೂಟ್ ಹೌಸ್‍ನಲ್ಲಿಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು ಹೈಕೋರ್ಟ ಅಂತಿಮ ತೀರ್ಪು ನೀಡಿದ್ದು, ಸರಕಾರದ ಆದೇಶವನ್ನು ಹೈಕೋರ್ಟ ಎತ್ತಿ ಹಿಡಿದಿದೆ. ಪರೀಕ್ಷೆಗೆ ಕಡ್ಡಾಯವಾಗಿ ಸಮವಸ್ತ್ರ ಧರಿಸಿಕೊಂಡು ಬರಬೇಕು.
ರಿಪಿಟರ್ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಗೊಳಿಸಿಲ್ಲ. ಆದರೆ ಹಿಜಾಬ್ ಮತ್ತು ಕೇಸರಿ ಶಾಲ್‍ಗೆ ಅವಕಾಶವಿಲ್ಲವೆಂದು ಸ್ಪಷ್ಟವಾಗಿ ತಿಳಿಸಿದರು.
ಈ ಕುರಿತು ಆಯಾ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮಾರ್ಚ 28 ರಿಂದ ಜರುಗಲಿರುವ ಪರೀಕ್ಷೆಗೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲಿವೆ. ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೆ ಓರ್ವ ಅಧಿಕಾರಿಯನ್ನು ನೇಮಿಸಲಾಗಿದೆ. ಯಾವುದೇ ರೀತಿಯ ತೊಂದರೆ ಇಲ್ಲದೇ ಪರೀಕ್ಷೆಗಳು ಸುಸೂತ್ರವಾಗಿ ನಡೆಯಲಿವೆ ಎಂದು ಸಚಿವ ನಾಗೇಶ ತಿಳಿಸಿದರು.
ಇದೇ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಇದ್ದರು.
*ಪರೀಕ್ಷಾ ಸಿದ್ದತೆ ವೀಕ್ಷಿಸಿದ ಸಚಿವರು*
ಜಿಲ್ಲೆಯ ಜಮಖಂಡಿ ನಗರದಲ್ಲಿರುವ ಬಾಲಕರ ಸರಕಾರಿ ಪರಷುರಾಮ ಬಾವು ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವರಾದ ಬಿ.ಸಿ.ನಾಗೇಶ ಭೇಟಿ ನೀಡಿ ಪರೀಕ್ಷಾ ಸಿದ್ದತೆ ಹಾಗೂ ಕೊಠಡಿಗಳಿಗೆ ತೆರಳಿ ವೀಕ್ಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಜಮಖಂಡಿ ಶಾಸಕ ಆನಂದ ನ್ಯಾಮಗೌಡ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ, ಹನಮಂತ ನಿರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ, ತಹಶೀಲ್ದಾರ ಪ್ರಶಾಂತ ಚನಗೊಂಡ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರವಣಕುಮಾರ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.