*ಬಲಿಷ್ಟ ಪ್ರಜಾಪ್ರಭುತ್ವಕ್ಕೆ ತಪ್ಪದೇ ಮತದಾನ ಮಾಡಿ
ನಿಮ್ಮ ಸುದ್ದಿ ಬಾಗಲಕೋಟೆ
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಸ್ವೀಪ್‍ನಡಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾವಿರಾರು ಜನ ಮೊಬೈಲ್ ಟಾರ್ಚ ಬೆಳಗಿಸುವದರ ಮೂಲಕ ವಿನೂತನ ಪ್ರಯೋಗಕ್ಕೆ ಶನಿವಾರ ಜಿಲ್ಲಾಡಳಿತ ಮುಂದಾಯಿತು.
ಬಾಗಲಕೋಟೆ ಮೈ ಓಟ ಮೈ ಪ್ಯೂಚರ್ 2023 (ನಮ್ಮ ಮತ ನಮ್ಮ ಭವಿಷ್ಯ) ಎಂಬ ಘೋಷ ವ್ಯಾಕ್ಯವನ್ನು ಮೊಬೈಲ್ ಟಾರ್ಚ ಬೆಳಕಿನಲ್ಲಿ ಮೂಡುವಂತೆ ಮಾಡಿ ಎಲ್ಲರ ಗಮನ ಸೆಳೆಯಲಾಯಿತು. ಇಂತಹ ವಿನೂತನ ಪ್ರಯೋಗದ ಮೂಲಕ ಮತದಾನ ಮಹತ್ವನ್ನು ಸಾರಲು ಜಿಲ್ಲೆಯಾದ್ಯಂತ ಮತದಾನ ಜಾಗೃತಿಗೆ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್ ಜಂಟಿಯಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ಮತದಾರರ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಪ್ರಜಾಪ್ರಭುತ್ವದಲ್ಲಿ ದೃಡವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುತ್ತೇವೆಂದು ಪ್ರತಿಜ್ಞೆ ಮಾಡಲಾಯಿತು.
ಜಾಗೃತಿ ಕಾರ್ಯಕ್ರಮದಲ್ಲಿ ಯುಕೆಪಿಯ ಮಹಾವ್ಯವಸ್ಥಾಪಕ ಭಂವರ ಸಿಂಗ್ ಮೀನಾ, ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರ, ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಕನಿಷ್ಕ, ಬಾಗಲಕೋಟೆ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೇರಿದಂತೆ ಪೌರಕಾರ್ಮಿಕರು, ವಿಕಲಚೇತನರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.