ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು, ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿತ್ರದುರ್ಗ ಲೋಕಸಭಾ ಅಭ್ಯರ್ಥಿ ಚಂದ್ರಪ್ಪ ಅವರ ಪರವಾಗಿ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಇವರು, “ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ?” ಎಂದು ಪ್ರಶ್ನಿಸಿದ್ದಾರೆ.
“ಈ ದೇಶದ ಶೇ 95 ರಷ್ಟು ಬಹುಸಂಖ್ಯಾತ ಜನ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಒದಗಿಸುತ್ತಿರುವುದು ನಮ್ಮ ಸಂವಿಧಾನ. ಈ ಸಂವಿಧಾನವನ್ನು ಬದಲಾಯಿಸುತ್ತೀವಿ ಎನ್ನುವುದು ಬಿಜೆಪಿಯ ಅಜೆಂಡಾ. ಇದನ್ನು ಬಿಜೆಪಿ ಕೇಂದ್ರ ಸಚಿವರಾಗಿದ್ದವರೇ ಬಹಿರಂಗವಾಗಿ ಹೇಳಿದ್ದಾರೆ. ಆದ್ದರಿಂದ ದೇಶದ ಸಂವಿಧಾನವನ್ನು ಬದಲಾಯಿಸಿ ಮನುಸ್ಮೃತಿ ಜಾರಿಗೆ ತರಲು ಅವಕಾಶ ಕೊಡಬೇಡಿ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
“ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ, ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ?”ನಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ನಮ್ಮ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಮಿಸ್ಟರ್ ಮೋದಿಯವರೇ ಎಂದರು.