This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸತತ ಪ್ರಯತ್ನ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಹೇಳಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನಾದ್ಯಂತ ಬಾಲ ಕಾರ್ಮಿಕರು ಇನ್ನು ಅಲ್ಲಲ್ಲಿ ಕಂಡುಬರುತ್ತಿದ್ದಾರೆ. 2002 ರಿಂದ ಇಲ್ಲಿಯವರೆಗೆ ಈ ಪದ್ದತಿ ನಿರ್ಮೂಲನೆ ಕಾರ್ಯಕ್ರಮವನ್ನು ಆಚರಿಸುತ್ತಾ ಬಂದಿದ್ದೇವೆ. ಆದರೂ ಸಹ ನಿರೀಕ್ಷಿತ ಪ್ರಮಾಣದಲ್ಲಿ ನಿರ್ಮೂಲನೆ ಆಗಿರುವದರಿಲ್ಲ. ನಿರ್ಮೂಲನೆಗೆ ವಿವಿಧ ಇಲಾಖೆ ಹಾಗೂ ಸಾರ್ವಜನಿಕರ ಸತತ ಪ್ರಯತ್ನ ಅಗತ್ಯವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿ.ಪಂ ಸಿಇಓ ಟಿ.ಭೂಬಾಲನ್ ಮಾತನಾಡಿ ಬಾಲ ಕಾರ್ಮಿಕ ಪದ್ದತಿಗೆ ಬಡತನ ಮುಖ್ಯ ಕಾರಣವಾಗಿದ್ದು, ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿದಲ್ಲಿ ಬಾಲ ಕಾರ್ಮಿಕರಾಗುವದನ್ನು ತಪ್ಪಿಸಬಹುದಾಗಿದೆ. ಪಾಲಕ ಪೋಷಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ಸರಕಾರ ಬಡತನ ನಿರ್ಮೂಲನೆಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗುತ್ತಿದೆ. ಬಾಲಕಾರ್ಮಿಕ ತಡೆಗೆ ಹಾಗೂ ಬಾಲಕಾರ್ಮಿಕ ಪದ್ದತಿಗೆ ಒಳಗಾದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಕೆಲಸವಾಗಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ದತಿ, ಬಾಲ್ಯ ವಿವಾಹವು ತಡೆಗೆ ಅನೇಕ ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹಕ್ಕೆ ಒಳಗಾಗ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಲಾಗುತ್ತಿದೆ. ರಾಜ್ಯಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಈಗಾಗಲೇ ಸುರಕ್ಷಣಿ ಎಂಬ ವೆಬ್‍ಸೈಟ್ ರೂಪಿಸಲಾಗಿದ್ದು ಇದು ರಾಜ್ಯದ ಎಲ್ಲ ಜಿಲ್ಲೆಯಲ್ಲಿ ಅಳವಡಿಸಲು ಸರಕಾರ ಒಪ್ಪಿಗೆ ನೀಡಿದ್ದು, ವೆಬ್‍ಸೈಟ್‍ನಲ್ಲಿ ಬಾಲಕಾರ್ಮಿಕ ಪದ್ದತಿಗೆ ಒಳಗಾದ ಮಕ್ಕಳ ಮಾಹಿತಿಯನ್ನು ಸೇರಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಉಪನ್ಯಾಸಕರಾಗಿ ಆಗಮಿಸಿದ್ದ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಎನ್.ಮುತ್ತಗಿ ಮಾತನಾಡಿ ಮಕ್ಕಳು ರಾಷ್ಟ್ರದ ಸಂಪತ್ತಾಗಿದ್ದು, ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರಕಾರ ಶ್ರಮಿಸುತ್ತಿದೆ. ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಬಾಲಕಾರ್ಮಿಕ ಪದ್ದತಿ ವಿರೋಧಿ ಕಾಯ್ದೆ ಜಾರಿಗೆ ತಂದಿದೆ. ಮಕ್ಕಳ ಬಾಲ್ಯವನ್ನು ರಕ್ಷಿಸಿ ಬೆಳೆಸಲು ಬದ್ದರಾಗಬೇಕಿದೆ. ನಮ್ಮ ರಾಷ್ಟ್ರವಲ್ಲದೇ ಎಲ್ಲ 197 ರಾಷ್ಟ್ರಗಳಲ್ಲಿ ಈ ಪದ್ದತಿ ಕಾಣುತ್ತಿದ್ದು, ಆಂದೋಲನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಪದ್ದತಿ ನಿರ್ಮೂಲನೆಗೆ ಸರಕಾರದ ಜೊತೆ ಸಾರ್ವಜನಿಕರು ಸಹ ಕೈಜೋಡಿಸಬೇಕಿದೆ ಎಂದು ತಿಳಿಸಿದರು.

ಪ್ರಾರಂಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ 2022 ರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪತ್ತೆಗೆ ಸಹಕರಿಸಿದ ಅಂತ್ಯೋದಯ ಸೋಸಿಯಲ್ ಸರ್ವಿಸ್ ಸಂಸ್ಥೆಯ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶೆ ಹೇಮಾ ಪಸ್ತಾಪೂರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಗುಲಾಬ ನದಾಫ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನೀಲ ಬಗಟಿ, ಕಾರ್ಮಿಕ ನಿರೀಕ್ಷಕ ರಮೇಶ ಸಿಂದಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರದ ಪೂರ್ವದಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಪ್ರಚಾರ ವಾಹನಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎನ್.ವಿ.ವಿಜಯ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

*ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ*
————————————–
ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಿಲ್ಲಾ ಮತ್ತು ತಾಲೂಕ ಮಟ್ಟದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಅಮೂಲ್ಯ ಸಾಳುಂಕೆ (ಪ್ರಥಮ), ಅನುಷಾ ಗೋಕಾವಿ (ದ್ವಿತೀಯ), ಕೀರ್ತನಾ ಸರೋದ (ತೃತೀಯ), ಭಾಷಣ ಸ್ಪರ್ಧೆಯಲ್ಲಿ ಪೂರ್ಣಿಮಾ ಕಾಂಬಳೆ (ಪ್ರಥಮ), ಭಾಗ್ಯಶ್ರೀ ಅಂಬಿ (ದ್ವಿತೀಯ), ಶ್ರವಣಾ ಹೊತಗಿಗೌಡ್ರ (ತೃತೀಯ) ಸ್ಥಾನ ಪಡೆದರೆ, ತಾಲೂಕಾ ಮಟ್ಟದಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ಕೀರ್ತನ ಸರೋದೆ (ಪ್ರಥಮ), ಅಮೃತಾ ದೇಸಾಯಿ (ದ್ವಿತೀಯ), ಸಂಜನಾ ಸರೋದೆ (ತೃತೀಯ), ಭಾಷಣ ಸ್ಪರ್ಧೆಯಲ್ಲಿ ರುಕ್ಮಿಣಿ ಭಜಂತ್ರಿ (ಪ್ರಥಮ), ನಿರ್ಮಲಾ ಯಲಗನ್ನವರ (ದ್ವಿತೀಯ), ಅಮೃತಾ ಮಾಗಿ (ತೃತೀಯ) ಸ್ಥಾನ ಪಡೆದುಕೊಂಡರು.

Nimma Suddi
";